'ಜೆಡಿಎಸ್ ಅಧಿಕೃತ ಅಭ್ಯರ್ಥಿಗಳಿಗೇ ಮತ ನೀಡಿ'
ಕುಣಿಗಲ್: ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಮುಂಬರುವ ವಿಧಾನಸಭಾ ಚುನಾವಣೆಗಳ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುವುದರಿಂದ ಮತದಾರರು, ರಾಜ್ಯದ, ಪಟ್ಟಣದ ಜನತೆಯ ಸಮಸ್ಯೆಗೆ ಸದಾ ಸ್ಪಂದಿಸುವ ಜೆಡಿಎಸ್ ಅಧಿಕೃತ ಅಭ್ಯರ್ಥಿಗಳಿಗೆ ಮತ ನೀಡಿ ಅವರ ಗೆಲವಿಗೆ ಸಹಕರಿಸುವಂತೆ ಮಾಜಿ ಶಾಸಕ ಎಸ್.ಪಿ. ಮುದ್ದಹನುಮೇಗೌಡ ಮನವಿ ಮಾಡಿದರು.
ಶುಕ್ರವಾರ, ಪಟ್ಟಣದ ಕೋಟೆ ಪ್ರದೇಶದಲ್ಲಿನ ಕೋಟೆ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿಗಳ ಪರ ಮತಯಾಚನೆ ಕಾರ್ಯಕ್ಕೆ ಚಾಲನೆ ನೀಡಿ, ವಿವಿಧ ವಾರ್ಡ್ಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಪುರಸಭೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ, ಪಟ್ಟಣದ ಸಮಗ್ರ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಸರ್ಕಾರದ ಮಟ್ಟದಲ್ಲಿ ಹೋರಾಡಿ ಹೆಚ್ಚಿನ ಅನುದಾನ ತಂದು ಪಟ್ಟಣದ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುವುದು. ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮ ರೀತಿಯಲ್ಲಿ ಕಾಪಾಡಲು ಆದ್ಯತೆ ನೀಡುವ ಜೊತೆಯಲ್ಲಿ, ರಸ್ತೆಗಳು, ಒಳಚರಂಡಿ ವ್ಯವಸ್ಥೆ, ಪಟ್ಟಣ ಪ್ರದೇಶದಲ್ಲಿ ನಿವೇಶನ ಹಂಚಿಕೆಯಲ್ಲಾಗಿರುವ ಗೊಂದಲ ನಿವಾರಿಸಿ, ನಿವೇಶನರಹಿತರಿಗೆ ನಿವೇಶನ ನೀಡಿ, ಶೀಘ್ರದಲ್ಲಿಯೇ ಅವರ ಕನಸಿನ ಸೂರನ್ನು ಹೊಂದಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜೊತೆಯಲ್ಲಿ, ಪಟ್ಟಣದಲ್ಲಿನ ಇತಿಹಾಸ ಪ್ರಸಿದ್ದ ದೊಡ್ಡಕೆರೆಯನ್ನು, ರಾಜ್ಯಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸುವ ಜೊತೆಯಲ್ಲಿ ಮತ್ತಷ್ಟು ಹತ್ತು, ಹಲವು ಅಭಿವೃದ್ಧಿ ಕಾರ್ಯಗಳನ್ನು
ಕೈಗೊಳ್ಳಲಾಗುವುದೆಂದರು.
ಯುವಕರು: ಪುರಸಭೆಯ ವಿವಿಧ ವಾರ್ಡ್ಗಳಲ್ಲಿ ಜೆಡಿಎಸ್ ಅಧಿಕೃತ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲಾಗಿರುವ ಬಹುತೇಕರು ಯುವಕರಾಗಿದ್ದು, ಸಮಾಜಿಕ ಕಳಕಳಿ, ಬದ್ಧತೆಯಿಂದ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರಾಗಿರುವುದರಿಂದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿ, ಕೋಟೆ ಪ್ರದೇಶದ ವಿವಿಧ ವಾರ್ಡ್ಗಳಲ್ಲಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಜಯರಾಮಯ್ಯ, ಕೆಂಪೀರೇಗೌಡ,ಶ್ರೀನಿವಾಸ, ಕಂಠಯ್ಯ, ಅಭ್ಯರ್ಥಿಗಳಾದ ಚಂದ್ರಶೇಖರ್, ಫಾಜಿಲ್, ಸತೀಶ, ಇತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.