ಕುಡಿವ ನೀರಿಗೆ ಹಾಹಾಕಾರ: ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಆಲೂರು: ತಾಲೂಕಿನ ಕದಾಳು ಗ್ರಾಮದಲ್ಲಿ ಕುಡಿಯುವ ನೀರಿನ ಅಸಮರ್ಪಕ ಸರಬರಾಜಿಗೆ ರೊಚ್ಚಿಗೆದ್ದ ಗ್ರಾಮಸ್ಥರು ಶನಿವಾರ ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಹಾಕಿ ಖಾಲಿ ಕೊಡಗಳೊಂದಿಗೆ ಕಚೇರಿ ಎಂದುರು ಪ್ರತಿಭಟನೆ ನಡೆಸಿದರು.
ಕಳೆದ 3 ತಿಂಗಳಿಂದ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದ್ದು, ಗ್ರಾಮದಲ್ಲಿರುವ ಬೋರ್ವೆಲ್ಗಳಲ್ಲಿ ಅಂತರ್ಜಲ ಬತ್ತಿ ಹೋಗಿ ನೀರಿಗೆ ಹಾಹಾಕಾರ ಉಂಟಾಗಿದೆ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕುಡಿಯುವ ನೀರಿಗಾಗಿ ದೂರದ 5 ಕಿಮಿ ದೂರದಲ್ಲಿರುವ ಯಗಚಿ ಹೊಳೆಯಿಂದ ನೀರು ಹೊತ್ತು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಹೊಳೆಯ ನೀರು ಕೂಡ ಕಲುಷಿತಗೊಂಡಿದ್ದು, ಇದರಿಂದಾಗಿ ಗ್ರಾಮಸ್ಥರು ರೋಗಗಳಿಗೆ ತುತ್ತಾಗುತ್ತಿದ್ದು, ಈ ಸಂಬಂಧ ಹಲವಾರು ಬಾರಿ ಪಂಚಾಯ್ತಿ ಅಧಿಕಾರಿಗಳಿಗೆ ದೂರು ನೀಡಿದರೂ ಅಧಿಕಾರಿಗಳು ಸ್ಪಂದಿಸದ ಕಾರಣ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಗ್ರಾಮದಲ್ಲಿ ಪಂಚಾಯ್ತಿ ಅನುಮತಿಯಿಲ್ಲದೇ ಕೆಲವರು ಅಕ್ರಮವಾಗಿ ನಲ್ಲಿ ಅಳವಡಿಸಿಕೊಂಡಿದ್ದು, ಸಂಪ್ಗಳನ್ನು ನಿರ್ಮಿಸಿಕೊಂಡಿದ್ದಾರೆ. ಇದರಿಂದಾಗಿಯೇ ನೀರೊದಗಿಸಲು ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ನಾಳೆಯಿಂದಲೇ ಗ್ರಾಮದಲ್ಲಿ ಪಬ್ಲಿಕ್ ನಲ್ಲಿಗಳನ್ನು ಅಳವಡಿಸುವ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.