ಸಮಾಜಕ್ಕೆ ಪತ್ರಿಕೋದ್ಯಮದ ಕೊಡುಗೆ ಅಪಾರ
ಕ.ಪ್ರ. ವಾರ್ತೆ ತುಮಕೂರು ಮಾ.25
ಸಮಾಜಕ್ಕೆ ಪತ್ರಿಕೋದ್ಯಮದ ಕೊಡುಗೆ ಅಪಾರವಾಗಿದ್ದು ಭ್ರಷ್ಟಾಚಾರ, ಅತ್ಯಾಚಾರ, ಭಯೋತ್ಪಾದನೆಗಳಂಥ ಕಾನೂನು ವಿರೋಧಿ ಕೃತ್ಯಗಳಿಂದ ದೇಶವನ್ನು ಮುಕ್ತಗೊಳಿಸಲು ಪತ್ರಕರ್ತರು ತಮ್ಮ ಬರೆಹಗಳ ಮೂಲಕ ಜಾಗೃತಿ ಮೂಡಿಸಬೇಕು ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ರಮೇಶ್ ಕೆ. ಸಲಹೆ ನೀಡಿದರು.
ಅವರು ನಗರದ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ಸೃಜನ ಪತ್ರಿಕೋದ್ಯಮ ಮತ್ತು ಬರಹಾಸಕ್ತ ವಿದ್ಯಾರ್ಥಿಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರ 150 ನೇ ವರ್ಷಾಚರಣೆ ಸಂದರ್ಭದಲ್ಲಿ ರಾಷ್ಟ್ರದ ಪುನರ್ ನಿರ್ಮಾಣ ಕಾರ್ಯಕ್ಕೆ ಎಲ್ಲಾ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಸಾಗಬೇಕು ಎಂದರು. ಪತ್ರಕರ್ತ ಎಚ್.ಎಸ್. ರಾಮಣ್ಣ ಮಾತನಾಡಿ ವಿದ್ಯಾರ್ಥಿಗಳು ಸಾಹಿತ್ಯ ಕೃತಿಗಳನ್ನು ಅಭ್ಯಾಸ ಮಾಡಿ ಉತ್ತಮ ಬರವಣಿಗೆ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ಎಬಿವಿಪಿ ರಾಜ್ಯ ಉಪಾಧ್ಯಕ್ಷ ಡಾ. ರೋಹಿಣಾಕ್ಷ ಪತ್ರಿಕೋದ್ಯಮದ ಹೊಸ ಅವಕಾಶ ಮತ್ತು ಸವಾಲುಗಳು ಬಗ್ಗೆ ತಿಳಿಸಿದರು. ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಸದಸ್ಯ ಪ್ರೊ. ಶ್ರೀಪಾದಭಟ್ ಬರವಣಿಗೆಯ ಕೌಶಲ್ಯದ ಬಗ್ಗೆ ತಿಳಿ ಹೇಳಿದರು. ನಾಗರಾಜ ರೆಡ್ಡಿ ಅವರು ಸಮಾರೋಪ ಭಾಷಣ ಮಾಡಿದರು.
ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಎಚ್.ಎನ್. ವಿಜಯೇಂದ್ರ, ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಯೋಜನಾಧಿಕಾರಿ ಡಾ. ವೈ.ಎಂ. ರೆಡ್ಡಿ, ನಗರಾಧ್ಯಕ್ಷ ಜಿ. ಹನುಮಂತಯ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಹರಿಪ್ರಸಾದ್ ಮಾವಿನಹಳ್ಳಿ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಕವನ ವಾಚನ ಮತ್ತು ಲೇಖನ ವಾಚನ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಂತೋಷ್ ಉಷಾ ನಿರೂಪಿಸಿ, ನವೀನ್ ಕುಮಾರ್ ಸ್ವಾಗತಿಸಿ ಸುಬ್ರಹ್ಮಣ್ಯ ವಂದಿಸಿದರು. ಜಿಲ್ಲೆಯ ವಿವಿಧ ಕಾಲೇಜುಗಳಿಂದ ಆಯ್ಕೆಯಾದ 200 ವಿದ್ಯಾರ್ಥಿಗಳು ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.