ಶಾಸಕ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ
ಶಿರಾ: ಸಹಕಾರಿ ಧುರೀಣರಾದ ಮಧುಗಿರಿ ಕ್ಷೇತ್ರದ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಮಂತ್ರಿ ಪದವಿ ನೀಡುವಂತೆ ಒತ್ತಾಯಿಸಿ ಅವರ ಅಭಿಮಾನಿಗಳು ಶಿರಾ ಐ.ಬಿ. ಸರ್ಕಲ್‌ನಿಂದ ತಹಸೀಲ್ದಾರ್ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರದಲ್ಲಿ ಮಧುಗಿರಿ ಕ್ಷೇತ್ರದ ಶಾಸಕರಾದ ಕೆ.ಎನ್.ರಾಜಣ್ಣ ಅವರು ಒಮ್ಮೆ ವಿಧಾನಪರಿಷತ್ ಸದಸ್ಯರಾಗಿ, ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸುಮಾರು 20 ವರ್ಷಗಳಿಂದಲೂ ಸಹಕಾರಿ ಕ್ಷೇತ್ರದಲ್ಲಿ ನಿರಂತರ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಕೃಷಿ ಪತ್ತಿನ ಸಹಕಾರಿ ಸಂಘದಿಂದ ಪ್ರಾರಂಭವಾಗಿ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ಸ್ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಅಲ್ಲದೆ ಜಿಲ್ಲೆಯ ಅನೇಕ ಕಡು ಬಡವರಿಗೆ ದೀನ ದಲಿತರಿಗೆ ನೆರವಾಗಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ಬಹಳಷ್ಟು ಅನುಭವ ಹೊಂದಿದ್ದು, ರಾಜ್ಯದ ಸಹಕಾರಿ ಕ್ಷೇತ್ರಗಳು ಸೇರಿದಂತೆ ತುಮಕೂರು ಜಿಲ್ಲೆಗೆ ಇವರ ಸೇವೆ ಅವಶ್ಯಕವಾಗಿದೆ. ಕಾಂಗ್ರೆಸ್ ರಾಷ್ಟ್ರ ಮತ್ತು ರಾಜ್ಯದ ವರಿಷ್ಠರು ದಯಮಾಡಿ ಇವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಬೇಕೆಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಮೆರವಣಿಗೆಯಲ್ಲಿ ಮಾಜಿ ತಾ.ಪಂ. ಅಧ್ಯಕ್ಷ ಜಿ.ಎನ್.ಮೂರ್ತಿ, ಮಾಜಿ ಟಿ.ಎ.ಪಿ.ಸಿ.ಎಂ.ಎಸ್. ಅಧ್ಯಕ್ಷ ಕೆ.ರವಿಶಂಕರ್, ಸಿ.ಆರ್.ಸರ್ವೇಶ್, ಸೇರಿದಂತೆ ಹಲವರು ಹಾಜರಿದ್ದರು.