ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ
ತುಮಕೂರು: ಜಿಲ್ಲೆಯ ವಿವಿಧ ಧಾರ್ಮಿಕ ಸಂಸ್ಥೆಗಳ ಜೀರ್ಣೋದ್ಧಾರ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಿಗೆ ತಲಾ 15 ಲಕ್ಷದಂತೆ ಒಟ್ಟು 165 ಲಕ್ಷ ರು.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಕುರಿತಂತೆ ಚರ್ಚಿಸಲು ಕರೆಯಲಾಗಿದ್ದ ಉಪವಿಭಾಗಾಧಿಕಾರಿ, ತಹಸೀಲ್ದಾರರುಗಳು ಉಪಸ್ಥಿತರಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15 ಲಕ್ಷಗಳ ಅನುದಾನಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಸಂಸ್ಥೆಗಳ ಪಟ್ಟಿಯನ್ನು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರಿಂದ ಕಡ್ಡಾಯವಾಗಿ ಪಡೆದು ಜಿಲ್ಲಾಧಿಕಾರಿಗಳ ಅನುಮೋದನೆ ಪಡೆಯತಕ್ಕದ್ದು ಎಂದು ಸೂಚಿಸಿದರು. ಉದ್ದೇಶಿತ ಕಾಮಗಾರಿಗಳ ಅಂದಾಜು ಪಟ್ಟಿಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ಪಡೆದ ನಂತರವೇ ಕಾಮಗಾರಿ ಕೈಗೊಳ್ಳತಕ್ಕದ್ದು ಹಾಗೂ ಕಾಮಗಾರಿಯಲ್ಲಿ ಉಂಟಾಗುವ ಪ್ರಗತಿ ಆಧರಿಸಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾದ ಮೊತ್ತ 5 ಲಕ್ಷ ಮೇಲ್ಪಟ್ಟಲ್ಲಿ 2 ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. 2ನೇ ಕಂತನ್ನು ಬಿಡುಗಡೆ ಮಾಡುವ ಮುನ್ನ ಬಿಡುಗಡೆಯಾದ ಮೊದಲನೇ ಕಂತಿನ ಮೊತ್ತದ ಬಳಕೆ ಪ್ರಮಾಣ ಪತ್ರ ಪಡೆದ ನಂತರವೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಹಿಂದೂ ಧಾರ್ಮಿಕ ಸಂಸ್ಥೆಗಳು ಇವರಿಗೆ ಪೂರ್ಣ ವಿವರ ಪಟ್ಟಿ ಮಾಡಿ, ಪ್ರತಿ ತ್ರೈಮಾಸಿಕಕ್ಕೆ ಸರ್ಕಾರಕ್ಕೆ ವರದಿ ಸಲ್ಲಿಸತಕ್ಕದ್ದು ಎಂದು ತಿಳಿಸಿದರು. ಸಕ್ಷಮ ಪ್ರಾಧಿಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ಕೈಗೊಳ್ಳತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.