ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಒಬ್ಬನ ಸಾವು, ಐವರಿಗೆ ತೀವ್ರ ಗಾಯ
ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಮಾಕಳಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಮಾರುತಿ ವ್ಯಾನ್ನ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಶಿರಾ ತಾಲೂಕಿನ ಮೂರ್ತಿ (40) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿರುವ ಮೋಹನ್ ಕುಮಾರ್ (21), ಭಾಗ್ಯಮ್ಮ (45), ಅಭಿಲಾಷ (22), ಹೇಮ (1) ಹಾಗೂ ಇನ್ನೊಬ್ಬರ ಹೆಸರು ತಿಳಿದಿಲ್ಲ. ಗಾಯಗೊಂಡವರನ್ನು ದಾಸರಹಳ್ಳಿಯ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೊಳಗಾದವರೆಲ್ಲರೂ ಒಂದೇ ಕುಟುಂಬದವರಾಗಿದ್ದು ತುಮಕೂರು ಜಿಲ್ಲೆ ಶಿರಾ ತಾಲೂಕಿನವರು. ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಸಂಬಂದಿಕರ ಮನೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲಿದೆ: ಅನ್ನದಾನಿ
ಮಳವಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿಷ್ಠಿತ ಕಣವಾಗಿದ್ದು ಜೆಡಿಎಸ್ ಜಿಲ್ಲೆಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ಮಾಜಿ ಶಾಸಕ ಕೆ.ಅನ್ನದಾನಿ ತಿಳಿಸಿದರು.ಪಟ್ಟಣದ ಹೊರವಲಯದ ಕಣಗಲು ಬೊಮ್ಮದೇವರ ದೇವಸ್ಥಾನದ ಬಳಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪುಟ್ಟರಾಜು ಯೋಗ್ಯ ವ್ಯಕ್ತಿಯಾಗಿದ್ದು ಹಿಂದುಳಿದ, ಶೋಷಿತ ವರ್ಗಗಳ ಜನರ ನೋವಿಗೆ ಸ್ಪಂದಿಸುವ ಏಕೈಕ ಅಭ್ಯರ್ಥಿ ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು.