ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ನಿಷೇಧ
ಕನ್ನಡಪ್ರಭ ವಾರ್ತೆ, ತುಮಕೂರು, ಏ.24
ಕೇಂದ್ರ ಸರ್ಕಾರ ಈಗಾಗಲೇ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿಷೇಧಿಸಲಾಗಿದ್ದು, ಇದರಲ್ಲಿನ ಕಾನೂನು ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುಜಿಡಿ ವ್ಯವಸ್ಥೆ ಸೆಫ್ಟಿಕ್ ಟ್ಯಾಂಕ್ ಮುಂತಾದವುಗಳನ್ನು ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳನ್ನು ಮಾತ್ರ ಬಳಸಿ ಸ್ವಚ್ಛಗೊಳಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಸಂದರ್ಭಗಳಲ್ಲಿಯೂ ಕೆಲಸಗಾರರನ್ನು ಬಳಸಿ ನೇರವಾಗಿ ಇವುಗಳನ್ನು ಸ್ವಚ್ಛಗೊಳಿಸಬಾರದು, ಒಂದು ವೇಳೆ ಕೆಲಸಗಾರರನ್ನು ಬಳಸಿ ಇವುಗಳನ್ನು ಸ್ವಚ್ಛಗೊಳಿಸಿದ್ದಲ್ಲಿ ಇದಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಕಾರಣರಾದವರು ಅಪರಾಧಿಗಳಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯುಜಿಡಿ ವ್ಯವಸ್ಥೆ ಅಥವಾ ಸೆಫ್ಟಿಕ್ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸುವ ಸಂದರ್ಭಗಳಲ್ಲಿ ಕೆಲಸಗಾರರನ್ನು ಬಳಸುವುದನ್ನು ತಡೆಗಟ್ಟಲು ಈಗಾಗಲೇ ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಗೂ ಆಧುನಿಕ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನು ಒದಗಿಸಲಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅಗತ್ಯ ಅರಿವು ಮೂಡಲು ಸಾಕಷ್ಟು ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹ ಸೂಚನೆಗಳನ್ನು ನೀಡಲಾಗಿದೆ, ಇಷ್ಟೆಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ರಾಜ್ಯ ಸರ್ಕಾರದ ವತಿಯಿಂದ ತೆಗೆದುಕೊಂಡಿದ್ದರೂ ಇನ್ನೂ ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪ್ರಕರಣಗಳು ವರದಿಯಾಗುತ್ತಿರುವುದು ಬಹಳ ಆತಂಕಕಾಗಿ ಸಂಗತಿಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ ಯುಜಿಡಿ ವ್ಯವಸ್ಥೆ ಅಥವಾ ಸೆಫ್ಟಿಕ್ ಟ್ಯಾಂಕ್ ಗಳನ್ನು ಯಾವುದೇ ಸಂದರ್ಭಗಳಲ್ಲಿಯೂ ಕೆಲಸಗಾರರನ್ನು ಬಳಸಿ ನೇರವಾಗಿ ಸ್ವಚ್ಛಗೊಳಿಸುವುದನ್ನು ನಿಷೇಧಿಸಿದೆ. ಇಂತಹ ಪ್ರಕರಣಗಳು ವರದಿಯಾದಲ್ಲಿ ಇದಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಕಾರಣರಾದವರ ವಿರುದ್ದ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಈ ಮೂಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ.