ತುಮಕೂರು: ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ತುಮಕೂರು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಗರದ ಕುಣಿಗಲ್ ರಸ್ತೆಯಲ್ಲಿರುವ ಹೇಮಾವತಿ ನಾಲಾ ವಲಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಗತ್ಯವಾದ ಹೇಮಾವತಿ ನೀರನ್ನು ಜಿಲ್ಲೆಗೆ ಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿ ಹೇಮಾವತಿ ಕಚೇರಿ ಎದುರು ರಸ್ತೆತಡೆ ನಡೆಸಿ, ಮಾಜಿ ಸಚಿವ ಜೆಡಿಎಸ್ ಮುಖಂಡ ರೇವಣ್ಣ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಬಳಿಕ ಕಚೇರಿಯ ಗೇಟ್ನ್ನು ನೂಕಿ ಒಳನುಗ್ಗಿದ ಬಿಜೆಪಿ ಕಾರ್ಯಕರ್ತರು, ಹೇಮಾವತಿ ನಾಲಾ ವಲಯದ ಕಚೇರಿ ಮುಂಭಾಗದ ಹೂವಿನ ಕುಂಡಗಳನ್ನು ಧ್ವಂಸಗೊಳಿಸಿ, ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ, 0-79 ಕಿ.ಮೀ. ಉದ್ದದ ಹೇಮಾವತಿ ನಾಲೆ ಪದೇಪದೆ ಒಡೆಯುತ್ತಿರುವ ಹಿಂದೆ ಪ್ರಭಾವಿ ರಾಜಕಾರಣಿಗಳ ಕೈವಾಡ ಇದೆ ಎಂಬುದು ತಮಗೆ ಗೊತ್ತಿದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಗೂಂಡಾ ಕಾಯಿದೆಯಡಿ ಬಂಧಿಸಿ ಜೈಲಿಗೆ ಹಾಕಿದಾಗ ಮಾತ್ರ ತುಮಕೂರಿಗೆ ಹೇಮಾವತಿ ನೀರು ಸಿಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪದೇಪದೆ ಹೇಮಾವತಿ ನಾಲೆ ಒಡೆಯುತ್ತಿರುವ ಬಗ್ಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಸಿಎಂ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಶಾಸಕರ ಸಭೆ ಕರೆದು ಚರ್ಚೆ ನಡೆಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿಯೂ ಸುರೇಶ್ ಗೌಡ ಎಚ್ಚರಿಕೆ ನೀಡಿದರು.
ಹೇಮಾವತಿ ನೀರಿಗಾಗಿ ಆ.9 ರಂದು ಬಿಜೆಪಿ ವತಿಯಿಂದ ಕೆ.ಬಿ.ಕ್ರಾಸ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್, ಆ.10 ರಂದು ಕುಣಿಗಲ್ ಹೆದ್ದಾರಿ ಬಂದ್ ಹಾಗೂ ಆ.11 ರಂದು ತುರುವೇಕೆರೆ-ಗುಬ್ಬಿಯಲ್ಲಿ ರಸ್ತೆತಡೆ ನಡೆಸುವುದಾಗಿಯೂ ಅವರು ಘೋಷಿಸಿದರು.
ಮಾಜಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ಈ ಬಾರಿಯೂ ಹೇಮಾವತಿ ನಾಲೆ ಒಡೆದಿರುವುದು ದುರದೃಷ್ಟಕರ. ಈ ಬಗ್ಗೆ ಸರ್ಕಾರ ಶೀಘ್ರವೇ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಮಾತನಾಡಿ, ಸಿಎಂ ಹಾಗೂ ಸಚಿವರು ಸದಾ ಕಿತ್ತಾಟದಲ್ಲೇ ಮಗ್ನರಾಗಿದ್ದು, ಕುಡಿಯುವ ನೀರು, ಹೇಮಾವತಿ ನೀರಿನ ಸಮಸ್ಯೆ ಬಗೆಹರಿಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಜ್ಯೋತಿಗಣೇಶ್, ಶಿವಣ್ಣ, ಲೋಕೇಶ್ವರ್, ಕೊಪ್ಪಳ್ ನಾಗರಾಜ್, ಬೆಟ್ಟಸ್ವಾಮಿಗೌಡ, ನಂಜೇಗೌಡ, ಕೃಷ್ಣಕುಮಾರ್, ಗೂಳೂರು ಶಿವಕುಮಾರ್, ಕೆ.ಪಿ. ಮಹೇಶ್, ಬ್ಯಾಟರಂಗೇಗೌಡ ಮತ್ತಿತರರು ಭಾಗವಹಿಸಿದ್ದರು. ಇದೇ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಸುರೇಶ್ ಗೌಡ ಸೇರಿದಂತೆ ಎಲ್ಲ ಮುಖಂಡರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಯಿತು.