ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಗುಣಮಟ್ಟ ಶಿಕ್ಷಣ ನೀಡುವಲ್ಲಿ ಪ್ರಾಮಾಣಿಕತೆ ಮೆರೆಯಿರಿ

Vishwanath S
Updated On : 5 Feb 2014, 12:11 pm

ಗುಬ್ಬಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಶಿಕ್ಷಣ ಸಂಸ್ಥೆಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸಂಸದ ಜಿ.ಎಸ್.ಬಸವರಾಜು ಕರೆನೀಡಿದರು.
ಗುಬ್ಬಿ ಪಟ್ಟಣದ ಶುಭೋದಯ ಆಂಗ್ಲಶಾಲೆಯ ಬೆಳ್ಳಿ ಹಬ್ಬ ಹಾಗೂ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ನಾಟ್ಯ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶೈಕ್ಷಣಿಕ ಗುಣಮಟ್ಟ
ಉತ್ತಮಗೊಂಡಾಗ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಿದ್ದು  ಶಿಕ್ಷಣ ಸಂಸ್ಥೆಗಳು ಇಂದಿನ ಮಕ್ಕಳಿಗೆ  ಮೌಲ್ಯಾಧಾರಿತ ಶಿಕ್ಷಣ ನೀಡುವತ್ತ ಮುಂದಾಗಬೇಕೆಂದು ತಿಳಿಸಿದರು.
ಸಾಮಾಜಿಕ ಪ್ರಜ್ಞೆ ಮೂಡಿಸಿ: ಸಾನಿಧ್ಯವಹಿಸಿದ್ದ ಬೆಟ್ಟದಹಳ್ಳಿ ಗವಿಮಠದ ಶ್ರೀಚಂದ್ರಶೇಖರ ಸ್ವಾಮೀಜಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಪ್ರಸ್ತುತ ಸನ್ನಿವೇಶಕ್ಕನುಗುಣವಾಗಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು ಶಿಕ್ಷಣ ಸಂಸ್ಥೆಗಳು ಕೇವಲ ಶಿಕ್ಷಣವನ್ನಷ್ಟೆ ನೀಡದೆ ಮಕ್ಕಳಲ್ಲಿ ಸಾಮಾಜಿಕ ಪ್ರಜ್ಞೆ, ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕೊಂಡೊಯ್ಯುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.
ಪ್ರಗತಿ ಪಥದತ್ತ ಸಾಗಲು ಸಾಧ್ಯ: ಶಿಕ್ಷಣ ಪಡೆಯುವುದು ಕೇವಲ ಸರ್ಟಿಫೀಕೇಟ್‌ಗೆ ಅಲ್ಲ ಎಂಬುದನ್ನು ಮನವರಿಕೆ ಮಾಡಿಕೊಂಡು ಇಂದಿನ ವಿದ್ಯಾರ್ಥಿಗಳು ಸಮಾಜದ ಹಿತದೃಷ್ಟಿಯಿಂದ ಉತ್ತಮ ಗುಣ ಮಟ್ಟದ ಶಿಕ್ಷಣ ಪಡೆಯುವ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದ ಅವರು ಶಿಕ್ಷಣ ಕ್ಷೇತ್ರದಲ್ಲಿ ಯಾವ ರಾಷ್ಟ್ರ ಅಭಿವೃದ್ಧಿ ಹೊಂದುತ್ತದೆಯೋ ಆ ರಾಷ್ಟ್ರ ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಪಥದತ್ತ ಸಾಗಲು ಸಾಧ್ಯ.
ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ನಮ್ಮ ಸನಾತನ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವಂತಹ ಮೌಲ್ಯಾಧಾರಿತ ಶಿಕ್ಷಣ ನೀಡುವತ್ತ ಶಿಕ್ಷಣ ಸಂಸ್ಥೆಗಳು ಮುಂದಾಗಬೇಕೆಂದು ಕರೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಈಶ್ವರಯ್ಯ ಮಾತನಾಡಿ ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಇಲಾಖೆಯಿಂದ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಇಲಾಖೆಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದರು.
ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಪಡಿಸುವ ದೃಷ್ಟಿಯಿಂದ ವಿಶೇಷ ಕಾರ್ಯಾಗಾರಗಳನ್ನು ನಡೆಸಲಾಗುತ್ತಿದೆ. ಅಲ್ಲದೆ ಗುಣಮಟ್ಟದ ಶಿಕ್ಷಣ ನೀಡಲು ಹಲವು ಹಂತದ ರಚನಾತ್ಮಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.
ಆತಂಕಕಾರಿ: ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಬಸವರಾಜು ಮಾತನಾಡಿ ಜಗತ್ತಿನ ಎಲ್ಲಾ ಶಕ್ತಿಗಳಿಗಿಂತಲೂ ದೊಡ್ಡಶಕ್ತಿ ಶಿಕ್ಷಣವಾಗಿದ್ದು ಶಿಕ್ಷಣ ಸಂಸ್ಥೆಗಳು ಇಂದಿನ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದರ ಜೊತೆಗೆ ಸಾಮಾಜಿಕ ಮೌಲ್ಯಗಳನ್ನು ಕಲಿಸಿಕೊಡುವತ್ತ ಮುಂದಾಗಬೇಕೆಂದರು. ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಪಥದತ್ತ ಮುನ್ನುಗ್ಗುತ್ತಿರುವ ಇಂದಿನ ದಿನಗಳಲ್ಲಿ  ವಿದ್ಯಾವಂತರು ನಮ್ಮ ಗುರು ಹಿರಿಯರನ್ನು ಕಡೆಗಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸುವತ್ತ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಕರೆ ನೀಡಿದರು.
ತುಮಕೂರು ಎಪಿಎಂಸಿ ಅಧ್ಯಕ್ಷ ಶಿವಕುಮಾರ್, ಲಯನ್ಸ್ ಸಂಸ್ಥೆ ಅಧ್ಯಕ್ಷ ಜಿ.ಆರ್. ಶಿವಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಗುಬ್ಬಿ, ಶುಭೋದಯ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಟಿ.ಎಲ್.ರಾಜಶೇಖರ್, ಸಿದ್ದರಾಮೇಶ್ವರ ಬ್ಯಾಂಕ್‌ನ ರಾಜಶೇಖರ್, ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಜಿ.ಎನ್. ಬೆಟ್ಟಸ್ವಾಮಿ, ಮುಖಂಡ ಬಿ.ಎಚ್. ಶಿವಣ್ಣ, ಮುಖ್ಯ ಶಿಕ್ಷಕ ರಾಜೇಶ್, ಪ್ರಾಚಾರ್ಯರಾದ ಸುಧಾ ಸೇರಿದಂತೆ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ  ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement