ಅಕ್ರಮ ಮದ್ಯ ಮಾರಾಟ ತಡೆಗಟ್ಟುವಲ್ಲಿ ವಿಫಲ: ಆರೋಪ
ಗುಬ್ಬಿ: ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ನಿರಾತಂಕವಾಗಿ ನಡೆಯುತ್ತಿದ್ದರೂ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಲ್ಲಿ ಯಾವುದೇ ಅಗತ್ಯ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ ಎಬಿವಿಪಿ ಕಾರ್ಯಕರ್ತರು ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಅಕ್ರಮ ಮದ್ಯ ಮಾರಾಟದಿಂದ ಯುವಕರು ಮದ್ಯದ ಚಟಕ್ಕೆ ದಾಸರಾಗಿತ್ತಿದ್ದು ಚಿಕ್ಕವಯಸ್ಸಿನಲ್ಲಿಯೇ ಮದ್ಯ ವ್ಯಸನಿಗಳಾಗುತ್ತಿದ್ದಾರೆ. ಈ ಬಗ್ಗೆ ಹಲವಾರು ಬಾರಿ ಅಬಕಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟದಿದ್ದರೇ ತೀವ್ರತರ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಹಗಲು ರಾತ್ರಿಯೆನ್ನದೆ ಮದ್ಯಸೇವಿಸಿ ಮಹಿಳೆಯರು ಮತ್ತು ಮಕ್ಕಳು ಬೀದಿಯಲ್ಲಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಗಳಲ್ಲಿ ಎಲ್ಲೆಂದರಲ್ಲಿ ಮನಬಂದಂತೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು ಗ್ರಾಮೀಣ ಜನತೆ ಗ್ರಾಮದಲ್ಲೇ ದೊರೆಯುವ ಮದ್ಯವನ್ನು ಸೇವಿಸಿ ತನ್ನ ಕುಟುಂಬವನ್ನು ಕಡೆಗಣಿಸುವಂತಹ ಪರಿಸ್ಥಿತಿ ಉಂಟಾಗಿದೆ. ಸಂಬಂಧಿಸಿದ ಅಧಿಕಾರಿಗಳು ತ್ವರಿತವಾಗಿ ಅಕ್ರಮ ಮದ್ಯ ಮಾರಾಟಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯ ನಂತರ ಅಬಕಾರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಬಿವಿಪಿ ಮುಂಖಡರಾದ ಅರುಣ್, ರಂಗನಾಥ್ ಯಾದವ್, ಮಹೇಶ್, ಸೌಮ್ಯ ಸೇರಿದಂತೆ ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.