ಮಹಿಳೆಯರು, ಮಕ್ಕಳು ಮೋಸದ ಜಾಲಕ್ಕೆ ಸಿಲುಕುತ್ತಿರುವುದು ದೌರ್ಭಾಗ್ಯ: ಶಾಸಕ
ಮಾಗಡಿ: ಬಲವಾದ ಕಾನೂನುಗಳಿದ್ದರೂ ಮಹಿಳೆಯರು ಮತ್ತು ಮಕ್ಕಳು ಮೋಸದ ಜಾಲಕ್ಕೆ ಸಿಲುಕುತ್ತಿರುವುದು ಸಮಾಜದ ದೌರ್ಭಾಗ್ಯ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಆತಂಕ ವ್ಯಕ್ತಪಡಿಸಿದರು.
ಅವರು ಮಾಗಡಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗು ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟಲು ಬೃಹತ್ ಆಂದೋಲನಾ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಸಮಾಜದ ಕಣ್ಣಾಗಿದ್ದಾಳೆ. ಸಮಾಜದಲ್ಲಿನ ದುಷ್ಟಶಕ್ತಿಗಳು ಮಹಿಳೆ ಮತ್ತು ಮಕ್ಕಳನ್ನು ನಂಬಿಸಿ, ಸಾಗಾಣಿಕೆ ಮಾಡುತ್ತಿದ್ದಾರೆ. ಉದಾಹರಣೆಗೆ ಮನೆ ಕೆಲಸ, ಉದ್ಯೋಗದ ಅಮಿಷ, ಸುಳ್ಳು ಮದುವೆ, ಸುಳ್ಳು ದತ್ತುಗಳಂತಹ ಕಾನೂನು ಬಾಹಿರ ಚಟುವಟಿಕೆಗಳಿಗಾಗಿ ಲೈಂಗಿಕವಾಗಿ, ಆರ್ಥಿಕವಾಗಿ ಶೋಚನೀಯ ಪರಿಸ್ಥಿತಿಗೆ
ಬಲತ್ಕಾರವಾಗಿ ತಳ್ಳುವುದನ್ನು ತಡೆಗಟ್ಟಲು ಮಹಿಳಾ ಸಂಘಟನಾತ್ಮಕ ಹೋರಾಟ ಅನಿವಾರ್ಯವಾಗಿದೆ ಎಂದರು.
ತಾ.ಪಂ. ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಬಿ.ಟಿ.ವೆಂಕಟೇಶ್ ಮಾತನಾಡಿ ಮಕ್ಕಳಿಗೆ ಬಾಲ್ಯ ವಿವಾಹ ಮಾಡುವುದು ಬೇಡ. ಅಕ್ಷರ ಕಲಿಸಿ, ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಈ ನಿಟ್ಟಿನಲ್ಲಿ ಅವರಿಗೆ ನೈತಿಕ ಬೆಂಬಲ ನೀಡೋಣ ಎಂದರು. ಮಾಗಡಿ ಸಿಡಿಪಿಓ ಕೆಂಪಣ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಹಿಳೆಯರ ಮಾರಾಟ ತಡೆಗಟ್ಟಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲೂ ದುಡಿಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಾಧಾ ತಿಳಿಸಿದರು.
ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಸೋಮಲತಾ, ತಾಲೂಕು ಮಕ್ಕಳ ಕಲ್ಯಾಣಾಧಿಕಾರಿ ಖಾನ್, ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಮಾಲಾ, ಸಾಂತ್ವನ ಕೇಂದ್ರದ ಉಮೇಶ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾಧಿಕಾರಿಗಳು ಹಾಗೂ ಅಂಗನವಾಡಿ ಮೇಲ್ವಿಚಾರಕಿಯರು ಕಾರ್ಯಕರ್ತೆಯರು, ಸಹಾಯಕಿಯರು ಇತರರು ಇದ್ದರು.