ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಹಲವು ಯೋಜನೆ
ಗುಬ್ಬಿ: ಸರ್ಕಾರ ಶೈಕ್ಷಣಿಕ ಗುಣಮಟ್ಟ ಉತ್ತಮ ಪಡಿಸಲು ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ವಿದ್ಯಾರ್ಥಿಗಳು ಆ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಪಥದತ್ತ ಸಾಗುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ. ಬಸವರಾಜು ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ, ಸಾಂಸ್ಕತಿಕ, ಕ್ರೀಡೆ, ಎನ್ಸಿಸಿ, ಎನ್.ಎಸ್.ಎಸ್ ಹಾಗೂ ಇಕೋ ಕ್ಲಬ್ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಇಂದಿನ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆದರ್ಶ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವಂತೆ ತಿಳಿಸಿದರು.
ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಪೂರಕವಾದ ಶೈಕ್ಷಣಿಕ ವಾತಾವರಣ ನಿರ್ಮಿಸಲಾಗಿದ್ದು ವಿದ್ಯಾರ್ಥಿಗಳು ಪಾಠಪ್ರವಚನಗಳಿಗೆ ಹೆಚ್ಚಿನ ಗಮನ ಹರಿಸುವ ಮೂಲಕ ಮುಂಬರುವ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವ ಸದುದ್ದೇಶದಿಂದ ಹಲವಾರು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯ ಸಂಯೋಜನಾಧಿಕಾರಿ ಕಾಮಾಕ್ಷಮ್ಮ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಗುಣಾತ್ಮಕ ಶಿಕ್ಷಣ ಎನ್ನುವುದು ದೇಶದ ಶಕ್ತಿಯನ್ನು ಅಭಿವೃದ್ಧಿ ಪಡಿಸುವ ಸಾಧನವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ ನಿರಂತರ ಅಭ್ಯಾಸ ಮಾಡುವ ಮೂಲಕ ಉತ್ತಮ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವಂತೆ ತಿಳಿಸಿದರು.
ಶ್ರಮ ಅಗತ್ಯ: ಲೇಖಕಿ ಎಂ.ಸಿ.ಲಲಿತಾ ಮಾತನಾಡಿ ಶೈಕ್ಷಣಿಕ ಪ್ರಗತಿಯನ್ನು ಉತ್ತಮ ಪಡಿಸಲು ವಿದ್ಯಾರ್ಥಿಗಳು ಶ್ರಮಿಸುವುದರ ಜೊತೆಗೆ ನಮ್ಮ ಸಾಮಾಜಿಕ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ತಿಳಿಸಿದರು.
ಪ್ರಾಚಾರ್ಯ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಪಾಠಪ್ರವಚನಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಗಮನ ಹರಿಸುವ ಮೂಲಕ ಉತ್ತಮ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದ ಅವರು ನಮ್ಮ ಸಾಮಾಜಿಕ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಂಡು ಪ್ರಗತಿ ಪಥದತ್ತ ಸಾಗುವಂತೆ ತಿಳಿಸಿದರು.
ಉಪಪ್ರಾಚಾರ್ಯ ಪುಟ್ಟಮ್ಮ, ಶ್ರೀಚನ್ನಬಸವೇಶ್ವರ ಯುವಕ ಸಂಘದ ಕಾರ್ಯದರ್ಶಿ ಶಂಕರ್ಕುಮಾರ್, ಉಪನ್ಯಾಸಕರಾದ ಪ್ರೇಮಲೀಲಾ, ನರಸಿಂಹಪ್ರಸಾದ್, ಟಿ.ಎಚ್. ಲತಾ ಮುಂತಾದವರು ಭಾಗವಹಿಸಿದ್ದರು.