'ತಕ್ಕ ಶಿಕ್ಷೆ ನೀಡದಿದ್ದರೆ ಅಸ್ಥಿರತೆ ಉಂಟಾಗುತ್ತೆ'
ತುಮಕೂರು: ಅಪರಾಧಿಗಳಿಗೆ ತಕ್ಕಶಿಕ್ಷೆ ನೀಡದಿದ್ದರೆ ಸಮಾಜದಲ್ಲಿ ಅಸ್ಥಿರತೆ ಉಂಟಾಗುತ್ತದೆ ಎಂದು ರಾಜ್ಯಪಾಲ ಎಚ್. ಆರ್. ಭಾರದ್ವಾಜ್ ಅಭಿಪ್ರಾಯಪಟ್ಟರು. ಅವರು ತುಮಕೂರಿನ ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರಸ್ವಾಮಿಗಳ 106 ನೇ ಜನ್ಮದಿನೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಮಾಜಿ ಪ್ರಧಾನಿ ರಾಜೀವ್ಗಾಂಧಿ ಹಂತಕರ ಶಿಕ್ಷೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ರಾಜ್ಯಪಾಲರು, ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು. ರಾಜೀವ್ ಹಂತಕರ ಕ್ಷಮಾದಾನ ಅರ್ಜಿ ಇತ್ಯರ್ಥಗೊಳ್ಳಲು 11 ವರ್ಷ ಕಾಲಾವಕಾಶ ತೆಗೆದುಕೊಂಡಿದ್ದು ಸರಿಯಲ್ಲ. ಸಮಯಕ್ಕೆ ಸರಿಯಾಗಿ ಇತ್ಯರ್ಥ ಮಾಡಬೇಕು. ಗಲ್ಲು ಶಿಕ್ಷೆ ಅತ್ಯಂತ ವಿರಳ ಪ್ರಕರಣಗಳಲ್ಲಿ ಅಗತ್ಯ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದರು. ಮಾಜಿ ಪ್ರಧಾನಿ ಹಂತಕರ ಶಿಕ್ಷೆ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳದೇ ಹೋದಲ್ಲಿ ದೇಶಕ್ಕೆ ತಪ್ಪು ಸಂದೇಶ ಹೋದಂತಾಗುತ್ತದೆ. ಸಮಾಜದಲ್ಲಿ ಅಸ್ಥಿರತೆ ಉಂಟಾಗುತ್ತದೆ ಎಂದು ಎಚ್ಚರಿಕೆ ನೀಡಿದ ರಾಜ್ಯಪಾಲರು, ಈ ವಿಷಯಕ್ಕೆ ಸಂಬಂಧಿಸಿದಂತೆ ತಮಿಳ್ನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.