ಮಹಿಳೆಯರನ್ನು ಗೌರವದಿಂದ ನೋಡಿ: ಡಿಸಿ ಸತ್ಯಮೂರ್ತಿ ಕರೆ
ತುಮಕೂರು: ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಹಿಳೆಯರನ್ನು ವಿಶ್ವಾಸದಿಂದ ಕಂಡಲ್ಲಿ ಮತ್ತು ಅವರ ಸಮಸ್ಯೆಗಳಿಗೆ ಸ್ಪಂದಿಸಿದಲ್ಲಿ ಮಹಿಳೆಯರು ಒಳ್ಳೆಯ ಕೆಲಸಗಾರರಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೈಂಗಿಕ ದೌರ್ಜನ್ಯ ತಡೆಗಟ್ಟುವ ದೂರು ನಿವಾರಣಾ ಸಮಿತಿ ಪುನರ್ ರಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಟ್ಟಲು ಜಿಲ್ಲಾಧಿಕಾರಿಗಳವರ ವ್ಯಾಪ್ತಿಗೊಳಪಡುವ ಇಲಾಖೆಗಳಿಗೆ ಸಂಬಂಧಿಸಿದಂತೆ ದೂರು ನಿವಾರಣಾ ಸಮಿತಿಯನ್ನು ಪುನರ್ ರಚಿಸಲಾಗಿದೆ ಎಂದರು.
ಜಿಲ್ಲಾ ಆಸ್ಪತ್ರೆಯ ಬಯೋಕೆವುಸ್ಟ್ ಆದಂತಹ ಡಾ ಸುಮಿತ್ರ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಮಮತಾ ಎಂ.ಆರ್. ಅವರು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕ ಎಚ್. ಬಾಲಶೇಖರ್ ಸದಸ್ಯರಾಗಿರುತ್ತಾರೆ. ವಿವಿಧ ಇಲಾಖೆಗಳ ಇತರೆ ಏಳು ಮಂದಿ ಸಮಿತಿಯ ಸದಸ್ಯರಾಗಿದ್ದು, ಸದಸ್ಯರು 2 ವರ್ಷಗಳ ಅವಧಿಯವರೆಗೂ ಅಥವಾ ಮುಂದಿನ
ಆದೇಶದವರೆಗೂ ಕಾರ್ಯನಿರ್ವಹಿಸುವರು ಎಂದು ಅವರು ತಿಳಿಸಿದರು.
ಸಮಿತಿ ರಚನೆ ಅಗತ್ಯ: ಕಿರುಕುಳಕ್ಕೆ ಒಳಗಾದ ಮಹಿಳೆಗೆ ನ್ಯಾಯ ಒದಗಿಸಿ, ಕಿರುಕುಳ ನೀಡಿದಂತಹ ವ್ಯಕ್ತಿಯನ್ನು ದಂಡಿಸಲು ಸಮಿತಿ ರಚನೆ ಅತ್ಯಗತ್ಯವಾಗಿದ್ದು, ಜಿಲ್ಲಾ ಮಟ್ಟದಲ್ಲಿ ಎರಡು ದೂರು ನಿವಾರಣಾ ಸಮಿತಿಗಳನ್ನು ರಚಿಸಲಾಗಿದ್ದು, ಜಿಲ್ಲಾ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಇಲಾಖೆಗಳಿಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದೆ ಹಾಗೂ ಜಿಲ್ಲಾಧಿಕಾರಿಗಳವರ ವ್ಯಾಪ್ತಿಗೊಳಪಡುವ ಇಲಾಖೆಗಳಿಗೆ ಸಂಬಂಧಿಸಿದಂತೆ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಮಿತಿಯು ಕಾಲಕಾಲಕ್ಕೆ ಸಭೆ ಸೇರಿ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾಧಿಕಾರಿಗಳು ಈ ಸಂದರ್ಭ ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸುಜಾತಾ, ಸಹಕಾರ ಸಂಘಗಳ ಉಪನಿಬಂಧಕ ಎಚ್. ಬಾಲಶೇಖರ್, ಮತ್ತೋರ್ವ ಅಧಿಕಾರಿ ನಟರಾಜ್ ಸೇರಿದಂತೆ ವಿವಿಧ ಇಲಾಖೆಗಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು.