ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ...
ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 130 ವರ್ಷಗಳ ಇತಿಹಾಸವಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ.
ಅಂದಿನಿಂದ ಇಂದಿನವರೆಗೆ ಜನಪರವಾಗಿಯೇ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಬಡವರು, ದಲಿತರು, ಹಿಂದುಳಿದ ವರ್ಗಗಳ ಏಳಿಗೆಗಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸುತ್ತಾ ಬಂದಿದೆ ಎಂದರು.
ಇದಕ್ಕೆ ಪೂರಕವೆಂಬಂತೆ ರಾಜ್ಯ ಸರಕಾರ ಕ್ಷೀರಭಾಗ್ಯ, ಅನ್ನಭಾಗ್ಯ, ಶಾದಿಭಾಗ್ಯದಂತಹ ಕಾರ್ಯಕ್ರಮಗಳ ಮೂಲಕ ತಳಸಮುದಾಯಗಳ ಬೆನ್ನೆಲುಬಾಗಿದೆ. ಲಕ್ಷಾಂತರ ಜನರು ಇದರ ಲಾಭ ಪಡೆಯುತ್ತಿದ್ದಾರೆ. ಅದೇ ರೀತಿ ಕೇಂದ್ರದ ಯುಪಿಎ ಸರಕಾರವೂ ಸಹ ಆರ್.ಟಿ.ಇ, ಆರ್.ಟಿ.ಐ, 15 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಬಡವರ ಪರವಾಗಿ ನಿಂತಿದೆ ಎಂದರು.
ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್ ವಹಿಸಿದ್ದರು. ಶಾಸಕ ಡಾ.ರಫೀಕ್ ಅಹಮದ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆಂಚಮಾರಯ್ಯ, ಯುವಘಟಕದ ಆಪ್ತಾಬ್ ಅಹಮದ್, ವಿವಿಧ ವಿಭಾಗಗಳ ಮುಖಂಡರಾದ ತು.ಬಿ. ಮಲ್ಲೇಶ್, ಮಂಜುನಾಥ್, ರಾಮಕೃಷ್ಣಯ್ಯ, ಆಟೋರಾಜ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.