ಬರಗಾಲ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ನವೀನ್
ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿ ಅಂತರ್ಜಲ ಕುಸಿದಿದ್ದು 800ರಿಂದ 1000 ಅಡಿಯವರಗೆ ಕೊಳವೆ ಬಾವಿ ಕೊರೆದರೂ ನೀರು ಸಿಗದಂಥ ಪರಿಸ್ಥಿತಿ ತಲೆದೋರಿದೆ. ಆದರೂ ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ತಾಪಂ ಸದಸ್ಯ ಕೆಂಕೆರೆ ನವೀನ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಯಲು ಗುತ್ತಿಗೆ ಪಡೆದಿರುವ ಗುತ್ತಿಗೆದಾರರಿಗೆ ಹಣ ನೀಡಲು ಸಹ ಸರ್ಕಾರದಲ್ಲಿ ಹಣವಿಲ್ಲದ ದಿವಾಳಿ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕೊರೆದಿರುವ ಬಾಬ್ತು ಸುಮಾರು 1 ಕೋಟಿ ಗುತ್ತಿಗೆದಾರರಿಗೆ ಬಾಕಿ ಪಾವತಿಸಬೇಕಿದೆ. ಹೀಗಾಗಿ ಹೊಸದಾಗಿ ಕೊರೆಯಲು ಯಾರೂ ಮುಂದೆ ಬರುತ್ತಿಲ್ಲ. ಇದರಿಂದ ಹಳ್ಳಿಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ಹದಗೆಟ್ಟಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಇದುವರೆಗೂ ಜಿಲ್ಲಾಧಿಕಾರಿಗಳಾಗಲಿ ಅಥವಾ ತಹಸೀಲ್ದಾರ್ ಆಗಲಿ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಎಂದು ಆರೋಪಿಸಿದ್ದಾರೆ.