ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಮದ್ದೂರು, ಗೆಜ್ಜಲಗೆರೆಯಲ್ಲಿ ತೀವ್ರ ಆಕ್ರೋಶ

Mainashree
Updated On : 19 Jul 2014, 10:54 am

ಮದ್ದೂರು: ಕೃಷ್ಣರಾಜಸಾಗರ ಅಣೆಕಟ್ಟಿನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರೈತರು ಶನಿವಾರ ಮದ್ದೂರು ಹಾಗೂ ಗೆಜ್ಜಲಗೆರೆ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು. ತಾಲೂಕಿನ ಗೆಜ್ಜಲಗೆರೆ ಬಸ್ ನಿಲ್ದಾಣದಲ್ಲಿ ಮುಂಜಾನೆ ದಿಢೀರ್ ಪ್ರತಿಭಟನೆಗಿಳಿದ ಸಾದೋಳಲು, ಕುದರಗುಂಡಿ ಹಾಗೂ ಗೆಜ್ಜಲಗೆರೆ ಗ್ರಾಮಗಳ ಮಹಿಳೆಯರು ಸೇರಿದಂತೆ ನೂರಾರು ರೈತರು ರಸ್ತೆ ತಡೆ ನಡೆಸಿದರು.  ರೈತರ ಪ್ರತಿಭಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 45 ನಿಮಿಷಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡಿದರು.
ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಎಂ.ಬಿ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಅಂಬರೀಷ್ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೆ.ಆರ್.ಎಸ್. ಅಣೆಕಟ್ಟು ಭರ್ತಿಯಾಗುವ ಮುನ್ನವೆ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ನಂತರ ಮದ್ದೂರಿನ ಶಿವಪುರದ ಕೊಪ್ಪ ಹೊಸ ವೃತ್ತದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಪ್ರತಿಭಟನೆ ನಡೆಸಿದ ಕೊಪ್ಪ ಹಾಗೂ ಬೆಸಗರಹಳ್ಳಿ ಭಾಗದ ರೈತರು ರಸ್ತೆಯಲ್ಲಿ ಧರಣಿ ನಡೆಸುವ ಮೂಲಕ ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿದರು. ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಸುಮಾರು 1 ಗಂಟೆಗೂ ಹೆಚ್ಚುಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ತೊಂದರೆಗೊಳಗಾದರು. ಮುಂಗಾರು ಮಳೆ ಕೊರೆತೆಯಿಂದ ಬೆಳೆಗಳು ಒಣಗುವ ಹಂತಕ್ಕೆ ಬಂದಿವೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ತಮಿಳುನಾಡಿಗೆ ಕೆ.ಆರ್.ಎಸ್.ನಿಂದ ನೀರು ಬಿಡುವ ಮೂಲಕ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ಪ್ರತಿಭಟನೆಯಲ್ಲಿ  ರೈತ ಸಂಘದ ಜಿಲ್ಲಾಧ್ಯಕ್ಷ ಕೋಣಸಾಲೆ ನರಸರಾಜು,  ಮುಖಂಡರಾದ ಜಿ.ಎ.ಶಂಕರ್, ಸೀತಾರಾಮು, ರಾಮಕೃಷ್ಣಯ್ಯ, ವರದರಾಜು, ಕೀಳಘಟ್ಟ ನಂಜುಂಡಯ್ಯ, ಲಿಂಗಪ್ಪಾಜಿ, ರಾಮಲಿಂಗಯ್ಯ, ಸಿದ್ದೇಗೌಡ, ಚಂದ್ರು, ರವಿಕುಮಾರ್, ಗೊಲ್ಲರದೊಡ್ಡಿ ಅಶೋಕ, ಉಮೇಶ್ ಭಾಗವಹಿಸಿದ್ದರು.
ಮಾನವ ಸರಪಳಿ ನಿರ್ಮಿಸಿ
ರಸ್ತೆ ಸಂಚಾರಕ್ಕೆ ಅಡ್ಡಿ
ಮಂಡ್ಯ: ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ವಿದ್ಯಾರ್ಥಿಗಳು  ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಮಹಿಳಾ ಸರ್ಕಾರಿ ಕಾಲೇಜಿನ ಬಳಿ ಜಮಾಯಿಸಿದ ಮಹಿಳಾ ಮುನ್ನಡೆ, ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಮಂಡ್ಯ ನಗರ ಸ್ಲಂ ನಿವಾಸಿಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು, ಬೆಂಗಳೂರು-ಮೈಸೂರು ರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಕೆಲ ಕಾಲ  ಮಾನವ ಸರಪಳಿ ನಿರ್ಮಿಸುವ ಮೂಲಕ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಘೋಷಣೆ ಕೂಗಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement