ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಸಣ್ಣ ನೀರಾವರಿ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ

Srinivasa Murthy VN
Updated On : 4 Jun 2014, 9:56 am

ಗುಬ್ಬಿ: ಸಣ್ಣ ನೀರಾವರಿ ಇಲಾಖೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದ್ದು ಕೂಡಲೇ ಇಲಾಖೆಯ ಅಧಿಕಾರಿಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸುವಂತೆ ಶಾಸಕ ಎಸ್.ಆರ್.ಶ್ರೀನಿವಾಸ್ ಸೂಚಿಸಿದರು.
ಗುಬ್ಬಿ ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಣ್ಣ ನೀರಾವರಿ ಇಲಾಖೆಯಲ್ಲಿ ಹಲವಾರು ಮಹತ್ವದ ಯೋಜನೆಗಳಿವೆ. ಆದರೆ ಅಧಿಕಾರಿಗಳು ಆಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ನೀಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. 2013-14 ನೇ ಸಾಲಿನಲ್ಲಿ ಗಿರಿಜನ ಉಪಯೋಜನೆ ಹಾಗೂ ವಿಶೇಷ ಘಟಕ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕೊಳವೆ ಬಾವಿ ಕೊರೆಸುವಲ್ಲಿ ಇಲಾಖೆ ಅಧಿಕಾರಿಗಳು ಅವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು ಕೂಡಲೇ ಈ ಹಿಂದೆ ಮಂಜೂರು ಮಾಡಿರುವ ಕಾಮಗಾರಿಗಳನ್ನು ತಡೆಹಿಡಿದು ಅರ್ಹ ಫಲಾನುಭವಿಗಳನ್ನು ಗುರುತಿಸಿ ಹೊಸದಾಗಿ ಕಾಮಗಾರಿಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೂಚನೆ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಕಡೆಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮಗಳನ್ನು ಕೈಗೊಂಡು ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಯಾವುದೇ ಗ್ರಾಮಗಳಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನಲ್ಲಿ 463 ಅಂಗನವಾಡಿ ಕೇಂದ್ರಗಳಿದ್ದು ಅವುಗಳ ಪೈಕಿ 274 ಕೇಂದ್ರಗಳಿಗೆ ಮಾತ್ರ ಸ್ವಂತ ಕಟ್ಟಡಗಳಿದ್ದು ಉಳಿದ ಕೇಂದ್ರಗಳ ಕಟ್ಟಡ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಯಾವುದೇ ಕಾಮಗಾರಿಗಳು ವಿಳಂಬವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ತ್ವರಿತವಾಗಿ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದರು. ಆಹಾರ ಇಲಾಖೆಯಲ್ಲಿ ಪಡಿತರ ಚೀಟಿಗಳನ್ನು ನೀಡುವಲ್ಲಿ ಅವ್ಯವಸ್ಥೆಯಾಗಿದ್ದು ಇಬ್ಬರಿಗೂ ಒಂದೇ ಸಂಖ್ಯೆಯ ಪಡಿತರ ಚೀಟಿ ನೀಡಿದ್ದು ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ಈ ರೀತಿಯ ಗೊಂದಲಗಳಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಕ್ರಮ ಮದ್ಯ ಮಾರಾಟ: ತಾಲೂಕಿನಾದ್ಯಂತ ಅಕ್ರಮ ಮಧ್ಯ ಮಾರಾಟ ನಿರಾತಂಕವಾಗಿ ನಡೆಯುತ್ತಿದ್ದು ಜಿಲ್ಲಾ ಮಟ್ಟದ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚುತ್ತಿದ್ದಾರೆ. ಆದರೆ ತಾಲೂಕಿನ ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಲ್ಲಿ ವಿಫಲಾಗಿರುವುದು ವಿಷಾದಕರ  ಸಂಗತಿಯಾಗಿದ್ದು ಮುಂಬರುವ ದಿನಗಳಲ್ಲಿ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಬಕಾರಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ತಾಲೂಕಿನ ಚೇಳೂರಿನ ಭಾರತ್ ಪಬ್ಲಿಕ್ ಶಾಲೆಯಲ್ಲಿ ಆರ್.ಟಿ.ಇ ಅಡಿಯಲ್ಲಿ ಪ್ರವೇಶಾವಕಾಶ ಪಡೆದ ವಿದ್ಯಾರ್ಥಿಯೊಬ್ಬನಿಗೆ ನಿಯಮಾನುಸಾರ ನೀಡಬೇಕಾದ ಸೌಲಭ್ಯಗಳನ್ನು ನೀಡದಿರುವ ಬಗ್ಗೆ ಸಭೆಗೆ  ವಿದ್ಯಾರ್ಥಿಯೊಂದಿಗೆ ಬಂದ ಪೋಷಕರು ಶಾಸಕರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಮಾತನಾಡಿದ ಶಾಸಕರು ಸೂಕ್ತ ಕ್ರಮಕೈಗೊಂಡು ಆ ವಿದ್ಯಾರ್ಥಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.
ನೆನೆಗುದಿಗೆ: ಶಾಸಕ ಎಂ.ಟಿ.ಕೃಷ್ಣಪ್ಪ 69 ಲಕ್ಷ ರು. ವೆಚ್ಚದಲ್ಲಿ ತಾಲೂಕಿನ ಕಲ್ಲೂರು ಕೆರೆ ಬಳಿ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಸಂಬಂಧಿಸಿದ ಅಧಿಕಾರಿಗಳು ಮಳೆಗಾಲ ಆರಂಭವಾಗುವುದರೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ ಶಾಸಕರು ಈಗಾಗಲೇ ಸರ್ಕಾರದ ಹಲವು ಯೋಜನೆಗಳಡಿ ಕಾಮಗಾರಿ ಪ್ರಗತಿಯಲ್ಲಿದ್ದು ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯ್ತಿ ಅಧ್ಯಕ್ಷಕೆ.ಎನ್.ಬಾಲಕೃಷ್ಣ, ಉಪಾಧ್ಯಕ್ಷೆ ಚಿಕ್ಕಮ್ಮ, ಜಿಪಂ ಸದಸ್ಯರಾದ ಪಿ.ಬಿ. ಚಂದ್ರಶೇಖರಬಾಬು, ಟಿ.ಆರ್.ಗೌರಮ್ಮ, ಟಿ.ಎಚ್.ಕೃಷ್ಣಪ್ಪ, ನಾಗಮ್ಮ, ಮಮತಾ ಶಿವಲಿಂಗಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ತೀರ್ಥಪ್ರಸಾದ್, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪುಟ್ಟಸ್ವಾಮಿ, ತಹಸೀಲ್ದಾರ್ ಸಿದ್ದಪ್ಪ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement