ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ತುಮಕೂರು

ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

Mainashree
Updated On : 26 Jun 2014, 10:50 am

ಗುಬ್ಬಿ: ಕಳೆದ ಮೂರು ನಾಲ್ಕು ತಿಂಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದರೂ ಗ್ರಾಮ ಪಂಚಾಯ್ತಿಯವರು ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ತಾಲೂಕಿನ ಕಡಬ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗಹಾಕಿ ಸತತ 5 ಗಂಟೆಗೂ ಹೆಚ್ಚು ಕಾಲ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು.
ಕಡಬ ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಕಳೆದ ನಾಲ್ಕು ತಿಂಗಳಿಂದಲೂ ತೀವ್ರತರ ಸಮಸ್ಯೆ ಎದುರಿಸುತ್ತಿದ್ದು ಸಂಬಂಧಿಸಿದ ಗ್ರಾಮ ಪಂಚಾಯ್ತಿಯವರಿಗೆ ತಿಳಿಸಿದರೂ ಯಾವುದೇ ಅಗತ್ಯ ಕ್ರಮ ಕೈಗೊಳ್ಳದೆ ಇದ್ದು ಟ್ಯಾಂಕರ್ ಮೂಲಕವೂ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಇನ್ನಿಲ್ಲದ ಸಮಸ್ಯೆ ಎದುರಿಸುತ್ತಿದ್ದು ತ್ವರಿತವಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಹಠಹಿಡಿದು ನಿರಂತರವಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೆ ಪ್ರತಿಭಟನೆ ನಡೆಸಿದರು.
ಕುಡಿಯುವ ನೀರಿಗಾಗಿ ಕಡಬ ಗ್ರಾಮ ಪಂಚಾಯ್ತಿಯವರು ಕೆ.ರಾಂಪುರ ಕೆರೆ ಸಮೀಪ ಈಗಾಗಲೇ 12 ಕೊಳವೆ ಬಾವಿಗಳನ್ನು ಕೊರೆಸಿದ್ದು ಅಂತರ್ಜಲ ಕುಸಿತದಿಂದಾಗಿ ಬಹುತೇಕ ಎಲ್ಲಾ ಕೊಳವೆ ಬಾವಿಗಳು ಬತ್ತಿಹೋಗಿದ್ದು ಕೇವಲ ಎರಡು ಕೊಳವೆ ಬಾವಿಗಳಲ್ಲಿ ಮಾತ್ರ ಅಷ್ಟಿಷ್ಟು ನೀರು ಬರುತ್ತಿದ್ದು ಬರುವ ನೀರಿನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ತ್ವರಿತವಾಗಿ ಕೊಳವೆಬಾವಿಗಳನ್ನು ಕೊರೆಸಿದರೆ ಮಾತ್ರ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಸಾಧ್ಯವಾಗುತ್ತದೆ. ಅಲ್ಲಿಯವರೆಗೂ ನೀರಿನ ಸಮಸ್ಯೆ ಬಗೆಹರಿಯುವ ಸಾಧ್ಯತೆಗಳು ಕಂಡುಬರುತ್ತಿಲ್ಲ ಗ್ರಾಮ ಪಂಚಾಯ್ತಿಯವರು ಕುಡಿಯುವ ನೀರಿನ ಸಮಸ್ಯೆಯಿದ್ದರೂ ಯಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಪ್ರತಿಭಟನಾನಿರತ ಗ್ರಾಮಸ್ಥರು ತಿಳಿಸಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ಕಾರ್ಯನಿರ್ವಹಣಾಧಿಕಾರಿ ಪುಟ್ಟಸ್ವಾಮಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಇನ್ನೊಂದು ವಾರದಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಿ ಕಡಬ ಗ್ರಾಮದ ಜನತೆಗೆ ಕುಡಿಯುವ ನೀರು ಒದಗಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆದರು. ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಂಗಬೈರಯ್ಯ ಉಪಸ್ಥಿತರಿದ್ದರು.
ಪ್ರತಿಭಟನೆಯಲ್ಲಿ ತಾಪಂ ಅಧ್ಯಕ್ಷ ಕೆ.ಎನ್. ಬಾಲಕೃಷ್ಣ, ಗ್ರಾಮ ಮುಖಂಡರಾದ ರಂಗಸ್ವಾಮಯ್ಯ, ಸುರೇಶ್, ಈಶ್ವರ, ದ್ವಾರಕಾನಾಥ್, ಸಿದ್ದಗಂಗಮ್ಮ, ತ್ರಿವೇಣಿ ಸೇರಿದಂತೆ ನೂರಾರು ಗ್ರಾಮಸ್ಥರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement