ಇತಿಹಾಸ ಪ್ರಸಿದ್ಧ ಗೋಸಲ ಶ್ರೀಚನ್ನಬಸವೇಶ್ವರಸ್ವಾಮಿ ಅದ್ಧೂರಿ ಜಾತ್ರಾ ಮಹೋತ್ಸವ
ಗುಬ್ಬಿ: ಪಟ್ಟಣದ ಇತಿಹಾಸ ಪ್ರಸಿದ್ಧ ಗೋಸಲ ಶ್ರೀಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವವು ಸಹಸ್ರಾರು ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ವೈಭವಯುತವಾಗಿ ನೆರವೇರಿತು.
ದೇವಾಲಯದಲ್ಲಿ ಬೆಳಗ್ಗೆಯಿಂದಲೇ ರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದವು. ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತಾದಿಗಳು
ತಮ್ಮ ಇಷ್ಟಾರ್ಥ ಪೂಜೆ ಸಲ್ಲಿಸುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಪಟ್ಟಣದ ವಿವಿಧ ಸಮಾಜದವರು ಹಾಗೂ ವಿವಿಧ ಸಂಘ-ಸಂಸ್ಥೆಗಳು ವಿಶೇಷವಾಗಿ ಫಲಹಾರ ವಿತರಿಸಲಾಯಿತು.
ರಥೋತ್ಸವದಲ್ಲಿ ಹೊಸರಿತ್ತಿ ಮಠದ ಗುದ್ದಲಿ ಶಿವಯೋಗೀಶ್ವರ ಮಹಾಸ್ವಾಮೀಜಿ, ಉಪವಿಭಾಗಾಧಿಕಾರಿ ಸಿ. ಆನಂದ್, ತಹಸಿಲ್ದಾರ್ ಸಿದ್ದಪ್ಪ, ಸಂಸದ ಜಿ.ಎಸ್.ಬಸವರಾಜು, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಜಿ.ಡಿ.ಸುರೇಶ್ಗೌಡ, ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಜಿ. ಚಂದ್ರಶೇಖರ್, ಬಿಜೆಪಿ ರಾಜ್ಯ ಕಾರ್ಯದರ್ಶಿ ನಂದೀಶ್ ಸೇರಿದಂತೆ ಪಟ್ಟಣದ ವಿವಿಧ ಮುಖಂಡರು, ಭಕ್ತಾದಿಗಳು ಭಾಗವಹಿಸಿದ್ದರು.
ಭಕ್ತಾರು ರಥೋತ್ಸವಕ್ಕೆ ಬಾಳೆಹಣ್ಣು, ಧವನ ಎಸೆಯುವ ಮೂಲಕ ತಮ್ಮ ಭಕ್ತಿ ಭಾವ ಸಮರ್ಪಿಸಿದರು. ಭಕ್ತಾದಿಗಳಿಗೆ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿತ್ತು. ರಥೋತ್ಸವದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.