ದೇವೇಗೌಡರ ಆರೋಪ ಸತ್ಯಕ್ಕೆ ದೂರ: ವಿಶ್ವನಾಥ್
ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರನ್ನು ಸೋಲಿಸಿದ್ದಾರೆಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿರುವುದು ಸತ್ಯಕ್ಕೆ ದೂರವಾದದ್ದು ಎಂದು ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಎಚ್. ವಿಶ್ವನಾಥ್ ಹೇಳಿದರು. ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಎಲ್ಲರೂ ಆರೋಪ ಮಾಡುತ್ತಾರೆ. ಆದರೆ, ದೇವೇಗೌಡರು ಹೇಳಿರುವುದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದರು. ಅಭ್ಯರ್ಥಿಗಳ ಮೇಲೆ ಮಸಿ ಎರಚುವುದು, ಬಳಿಯುವುದು ಜನತಂತ್ರ ವ್ಯವಸ್ಥೆಗೆ ಅವಮಾನ ಮಾಡಿದಂತೆ. ಜನತಂತ್ರವ್ಯವಸ್ಥೆಯಲ್ಲಿ ಯಾರೇ ಅಭ್ಯರ್ಥಿಯಾದರೂ ಅವರನ್ನು ಗೌರವಿಸಬೇಕು. ಅವಮಾನಿಸುವುದನ್ನು ನಿಲ್ಲಿಸಬೇಕು ಎಂದು ಕೋರಿದರು.