ಜವಾಬ್ದಾರಿ ಅರಿತು ಸಿಬ್ಬಂದಿ ಕಾರ್ಯನಿರ್ವಹಿಸಲಿ
ಕೊರಟಗೆರೆ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯಿಂದ ಮತದಾನ ನಡೆಯಲು ಜವಾಬ್ದಾರಿ ಅರಿತು ಚುನಾವಣಾ ಸಿಬ್ಬಂದಿ ಕಾರ್ಯನಿರ್ವಹಿಸಬೇಕೆಂದು ತುಮಕೂರು ಲೋಕಸಭಾ ವ್ಯಾಪ್ತಿಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಪ್ರಕಾಶ್ ತಿಳಿಸಿದರು.
ಅವರು ತುಮಕೂರು ಲೋಕಸಭಾ ಚುನಾವಣಾ ವ್ಯಾಪ್ತಿಯ ಕೊರಟಗೆರೆ ಮೀಸಲು ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳಿಗೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನೀಡಿದ ತರಬೇತಿ ಶಿಬಿರದಲ್ಲಿ ಮಾತನಾಡಿ ಈ ತರಬೇತಿಯಲ್ಲಿ ಮತದಾನದ ಮಾಹಿತಿ ಅರಿತು ಕಾರ್ಯನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.
ನೇಮಕ: ತಹಸೀಲ್ದಾರ್ ರಾಮಚಂದ್ರಪ್ಪ ಮಾತನಾಡಿ ಮತಗಟ್ಟೆಯಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರದ ಬಳಕೆ, ಮತಗಟ್ಟೆ ಸುತ್ತಮುತ್ತ ಚುನಾವಣಾ ನಿಯಮಗಳಂತೆ ಕೈಗೊಳ್ಳಬೇಕಾದ ಕ್ರಮಗಳು, ಮುಕ್ತ ಮನದಾನಕ್ಕೆ ವಹಿಸಬೇಕಾದ ಮುನ್ನಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಿದ ಅವರು ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ 236 ಮತಗಟ್ಟೆಗಳಿದ್ದು ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು 186 ಮಂದಿ ಪಿಆರ್‌ಒ, 261 ಎಪಿಆರ್‌ಒ ಮತ್ತು 532 ಎರಡು ಮತ್ತು ಮೂರನೇ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 979 ಮಂದಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ ಎಂದರು.
ಅಂಚೆ ಮತಪತ್ರ ಪಡೆಯಿರಿ: ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ ಚುನಾವಣೆಗೆ ನೇಮಕವಾಗಿರುವ ಸಿಬ್ಬಂದಿಗೆ ಮತ ಚಲಾಯಿಸಲು ಅಂಚೆ ಮತಪತ್ರ ಪಡೆಯಿರಿ ಎಂದರು.