ನೀರು ಸಮಸ್ಯೆ ಪರಿಹಾರಕ್ಕೆ ನೆಪ ಬೇಡ
ಕ.ಪ್ರ.ವಾರ್ತೆ ಗುಬ್ಬಿ ಮೇ 13
ಅಂತರ್ಜಲ ಕುಸಿತದಿಂದಾಗಿ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗುತ್ತಿದ್ದು, ತಾಲೂಕಿನ ಹಲವಾರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿ
ಅಭಿವೃದ್ಧಿ ಅಧಿಕಾರಿಗಳು ತುರ್ತು ಗಮನ ಹರಿಸಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್.ಆರ್. ಶ್ರೀನಿವಾಸ್ ತಾಕೀತು ಮಾಡಿದರು.
ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಚರ್ಚಿಸಲು ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಲವಾರು ಗ್ರಾಮಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು ಗ್ರಾಮೀಣ ಜನತೆ ಕುಡಿಯುವ ನೀರಿಗಾಗಿ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸಮರೋಪಾದಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಹೆಚ್ಚುವರಿ ಕೊಳವೆ ಬಾವಿ: ಈಗಾಗಲೇ ಕುಡಿಯುವ ನೀರಿನ ಸಮಸ್ಯೆಗಳಿರುವ ಗ್ರಾಮಗಳಲ್ಲಿ ಹೆಚ್ಚುವರಿಯಾಗಿ ಕೊಳವೆ ಬಾವಿಗಳನ್ನು ಕೊರೆಸಲಾಗಿದ್ದು ಕುಡಿಯುವ ನೀರಿನ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ಗುತ್ತಿಗೆ ದಾರರು ಮತ್ತು ಸಂಬಂಧಿಸಿದ ಎಂಜಿನಿಯರ್ಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ ಅವರು ಆಯಾ ವ್ಯಾಪ್ತಿಯ ಇಂಜಿನಿಯರ್ಗಳು ಮತ್ತು ಪಂಚಾಯ್ತಿ
ಅಭಿವೃದ್ಧಿ ಅಧಿಕಾರಿಗಳು ಸ್ಥಳದಲ್ಲಿದ್ದು ತ್ವರಿತವಾಗಿ ಕಾಮಗಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವತ್ತ ವಿಶೇಷ ಗಮನ ಹರಿಸಬೇಕೆಂದರು.
ಅಲ್ಲದೆ ಕುಡಿವ ನೀರಿನ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ಅಗತ್ಯ ಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕೆಂದು ತಾಕೀತು ಮಾಡಿದರು.
ಕುಡಿಯುವ ನೀರಿನ ಕಾಮಗಾರಿಗಳಿಗೆ ಅಗತ್ಯವಿರುವ ವಿದ್ಯುತ್ ಸೌಲಭ್ಯಗಳನ್ನು ನಿಯಮಾನುಸಾರ ಕಲ್ಪಿಸುವುದರ ಜೊತೆಗೆ ಅನಗತ್ಯವಾಗಿ ಕಾಮಗಾರಿಗಳು ವಿಳಂಬವಾಗದಂತೆ ಬೆಸ್ಕಾಂ ಅಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು ಎಂಜಿನಿಯರ್ಗಳು ಕುಡಿಯುವ ನೀರಿನ ಕಾಮಗಾರಿಗಳು ಪೂರ್ಣಗೊಂಡ ನಂತರವೇ ಗುತ್ತಿಗೆ ದಾರರಿಗೆ ಬಿಲ್ ಪಾವತಿಸಬೇಕೇ ಹೊರತು, ಯಾವುದೇ ಕಾರಣಕ್ಕೂ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಂಬಂಧಿಸಿದ ಗುತ್ತಿಗೆದಾರರರಿಗೆ ಬಿಲ್ ನೀಡಬಾರದೆಂದು ತಾಕೀತು ಮಾಡಿದರು.
ತಹಸೀಲ್ದಾರ್ ಸಿದ್ದಪ್ಪ, ತಾಪಂ ಅಧಿಕಾರಿ ಎಸ್.ಪುಟ್ಟಸ್ವಾಮಿ, ಜಿಪಂ ಏಇಇ ರಮೇಶ್ ಸೇರಿದಂತೆ 33 ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.