'ವಿದ್ಯಾರ್ಥಿ ವೃಂದ ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸಲಿ'
ಗುಬ್ಬಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ಪಾಠ ಪ್ರವಚನಗಳಷ್ಟೆ ಮುಖ್ಯವಾದವುಗಳಾಗಿದ್ದು, ರಜೆ ಅವಧಿಯಲ್ಲಿ ಕಾಲಹರಣ ಮಾಡದೆ ಬೇಸಿಗೆ ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆದರ್ಶ ವಿದ್ಯಾರ್ಥಿಗಳಾಗಿ ರೂಪುಗೊಳ್ಳುವಂತೆ ತಹಸೀಲ್ದಾರ್ ಸಿದ್ದಪ್ಪ ಕಿವಿಮಾತು ಹೇಳಿದರು.
ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ, ತಾಲೂಕು ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. 6 ರಿಂದ 16 ವರ್ಷದ ಮಕ್ಕಳಿಗಾಗಿ ವಿಶೇಷವಾಗಿ ಈ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯೋಜನಾಧಿಕಾರಿ ಕೆ.ಆರ್.ಹೊನ್ನೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ. ಬಸವರಾಜು ಮತ್ತಿತರರು ಮಾತನಾಡಿದರು.