ಮುದ್ದಹನುಮೇಗೌಡರ ಆಯ್ಕೆಗೆ ಅಭಿನಂದನೆ
ಗುಬ್ಬಿ: ಜಿಲ್ಲೆಯ ಅಭಿವೃದ್ಧಿಗಾಗಿ ಎಸ್.ಪಿ. ಮುದ್ದಹನುಮೇಗೌಡರನ್ನು ಲೋಕಸಭಾ ಸದಸ್ಯರನ್ನಾಗಿ ಅತ್ಯಧಿಕ ಮತಗಳ ಅಂತರದಿಂದ ಜಯಗಳಿಸಲು ಸಂಪೂರ್ಣ ಸಹಕಾರ ನೀಡಿದ ಜಿಲ್ಲೆಯ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಎನ್.ಸಿ. ಕೃಷ್ಣಕಾಂತ್ ಅಭಿನಂಧಿಸಿದರು.
ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಸೇರಿದಂತೆ ನೆನೆಗುದಿಗೆ ಬಿದ್ದಿರುವ ಹಲವಾರು ಮಹತ್ವದ ಯೋಜನೆಗಳನ್ನು ನೂತನ ಸಂಸದರ ನೆರವಿನಿಂದ ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳು ಹಾಗೂ ಸಹಕಾರ ಸಂಘಗಳ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಗೆಲವಿಗೆ ಜಿಲ್ಲೆಯ ದಲಿತ ಬಂಧುಗಳು ಸಂಪೂರ್ಣ ಸಹಕಾರ ನೀಡಲಿದ್ದು ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಶ್ರಮಿಸುವುದಾಗಿ ತಿಳಿಸಿದ ಅವರು ಗುಬ್ಬಿ ತಾಲೂಕಿನಲ್ಲಿ ನೆನೆಗುದಿಗೆ ಬಿದ್ದಿರುವ ಕುಡಿಯುವ ನೀರಿನ ಯೋಜನೆಗಳು ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನೂತನ ಸಂಸದರೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ ತಂದು ಸಮಗ್ರ ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಸುಧಾರಣೆಗೆ ಕೈಗಾರಿಕೆಗಳ ಸ್ಥಾಪನೆ ಹಾಗೂ ಗುಬ್ಬಿ ತಾಲೂಕಿನಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪನೆಗೆ ನೂತನ ಸಂಸದರ ಸಹಕಾರದಿಂದ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ ಅವರು ರಾಜ್ಯ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು ಸರ್ಕಾರದ ಯೋಜನೆಗಳು ಪ್ರಸಕ್ತ ಚುನಾವಣೆಯಲ್ಲಿ ಹೆಚ್ಚು ಸಹಕಾರಿಯಾದವು. ಮತದಾರರು ಈ ಭಾರಿ ಸರ್ಕಾರದ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು ಮುಂಬರುವ ದಿನಗಳಲ್ಲಿ ನೂತನ ಸಂಸದರು ಜಿಲ್ಲೆಯ ಸರ್ವಾಂಗೀಣ ಅಭಿವೃಗೆ ಮತ್ತಷ್ಟು ವಿನೂತನ ಯೋಜನೆಗಳನ್ನು ಜಾರಿಗೊಳಿಸಲಿದ್ದಾರೆಂದರು.
ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರ ಸರ್ವಾಂಗೀಣ ಏಳ್ಗೆಗೆ ಸದಾ ಶ್ರಮಿಸುತ್ತಿರುವ ಕಾಂಗ್ರೆಸ್ ಪಕ್ಷ ಜನಪರವಾಗಿದೆ. ಮುಂದಿನ ದಿನಗಳಲ್ಲಿಯೂ ಮತದಾರ ಬಂಧುಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲವಿಗೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.