ಕುಂದಾಪುರ: 12 ವಾರ್ಡ್ನ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕುಂದಾಪುರ: ನಗರಾಡಳಿತ ಸಂಸ್ಥೆಗಳ ಚುನಾವಣೆ ಮಾ. 7ರಂದು ನಡೆಯಲಿದ್ದು, ಇಲ್ಲಿನ ಸಾಲಿಗ್ರಾಮ ಪಟ್ಟಣ ಪಂಚಾಯತಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಕಳೆದ ಬಾರಿ ಬಿಜೆಪಿಗೆ ಸಮಬಲದ ಪೈಪೋಟಿ ನೀಡಿದ್ದರೂ, ಕೂದಲೆಳೆಯ ಅಂತರದಿಂದ ಅಧಿಕಾರಕ್ಕೆ ಏರುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ ಬಿಜೆಪಿಗಿಂತ ಮೊದಲೇ ಆಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಲ್ಲಿನ ಒಟ್ಟು 14 ವಾರ್ಡ್ಗಳ ಪೈಕಿ 12 ವಾರ್ಡ್ಗಳ ಅಭ್ಯರ್ಥಿಗಳ ಪಟ್ಟಿಯನ್ನು ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಕುಂದರ್ ಗುರುವಾರ ಪ್ರಕಟಿಸಿದ್ದಾರೆ.
ಇವರಲ್ಲಿ 7 ಮಂದಿ ಗುರುವಾರವೇ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಹೆಗ್ಗಡ್ತಿ ಮಕ್ಕಿ ಮತ್ತು ಕಾರ್ತಟ್ಟು ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ಇನ್ನೊಂದೆರಡು ದಿನಗಳಲ್ಲಿ ಈ ಹೆಸರುಗಳನ್ನು ಪ್ರಕಟಿಸಲಾಗುವುದು.
ಈ ಬಾರಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ಪಾಲಾಗಲಿದೆ ಎಂದು ಶಂಕರ ಕುಂದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಕಚೇರಿಯಿಂದ ಅಭ್ಯರ್ಥಿಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಿ ನಾಮಪತ್ರ ಸಲ್ಲಿಸಿದರು.