ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ವೈದ್ಯರ ವೇತನ ತಾರತಮ್ಯ ನಿವಾರಣೆಗೆ ಚಿಂತನೆ: ಸಚಿವ

Vishwanath S
Updated On : 10 Nov 2013, 12:20 pm

ಉಡುಪಿ: ಮೆಡಿಕಲ್ ಕಾಲೇಜು ಹಾಗೂ ಆರೋಗ್ಯ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನ ತಾರತಮ್ಯವನ್ನು ನೀಗಿಸುವ ಬಗ್ಗೆ ಚಿಂತನೆ ನಡೆದಿದ್ದು, ಪ್ರಸ್ತಾಪ ಸರ್ಕಾರದ ಮುಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಯು.ಟಿ. ಖಾದರ್ ತಿಳಿಸಿದರು.
 ಅವರು ಶನಿವಾರ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ 26ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ವೈದ್ಯರು ಕೇವಲ ತಮ್ಮ ಸಂಬಳ ಇನ್ನಿತ್ತರ ಸ್ವಹಿತಾಸಕ್ತಿಗೆ ಪ್ರಾಮುಖ್ಯತೆ ನೀಡುವುದರಿಂದ ಗೌರವ ಸಿಗಲಾರದು ಬದಲಾಗಿ ಜನಪರ ಕಾಳಜಿಯನ್ನು ಹೊಂದಿದ್ದು, ಜನರ ಪ್ರೀತಿಗೆ ಪಾತ್ರರಾಗಬೇಕು ಎಂದರು.
 ಅಲ್ಲದೇ ಜನರಲ್ಲಿ ಇನ್ನೂ ಆರೋಗ್ಯ ರಕ್ಷಣೆಯ ಬಗ್ಗೆ ಜ್ಞಾನ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕಾದ ಅಗತ್ಯತೆ ಇದೆ ಎಂದು ತಿಳಿಸಿದರು.
ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಗೌರವಾಧ್ಯಕ್ಷ ಎಚ್. ಎನ್. ರವೀಂದ್ರ, ಸಂಸ್ಥೆಯ ಪ್ರಮುಖ ಬೇಡಿಕೆಗಳನ್ನು ಸಚಿವರ ಮುಂದೆ ಪ್ರಸ್ತಾಪಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ ಮಾತನಾಡಿ ಸರ್ಕಾರಿ ಆಸ್ಪತ್ರೆಗಳು ಕೇವಲ ಬಡವರಿಗೆ ಸೀಮಿತವಾಗಿಲ್ಲ, ಎಲ್ಲರೂ ಅವುಗಳ ಸೇವೆ ಪಡೆದುಕೊಳ್ಳುವಂತಾಗಬೇಕು. ಹಾಗಾಗಿ ಸರ್ಕಾರಿ ಆಸ್ಪತ್ರೆಗಳು ಗುಣಮಟ್ಟ ಕಾಯ್ದುಕೊಳ್ಳಬೇಕಾಗಿದೆ ಎಂದರು.
 ಈ ಸಂದರ್ಭದಲ್ಲಿ ಸಂಸದ ಜಯಪ್ರಕಾಶ್ ಹೆಗ್ಡೆ ವೆಬ್‌ಸೈಟ್ ಅನಾವರಣಗೊಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಸ್ಮರಣ ಸಂಚಿಕೆ ನಿನಾದ ಬಿಡುಗಡೆಗೊಳಿಸಿದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಡಾ. ಶಶಿಧರ್ ಬಸವರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಉಪೇಂದ್ರ ನಾಯಕ್, ಶಾಸಕ ಪ್ರಮೋದ್ ಮಧ್ವರಾಜ್, ಕುಂದಾಪುರ  ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಟಿ. ಶ್ರೀಯಾನ್, ಜಿಲ್ಲಾಧಿಕಾರಿ ಎಂ.ಟಿ. ರೇಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಸೇವೆಗಳ ಆಯುಕ್ತ ವಿ.ಬಿ. ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿ ಡಾ. ಗೀತಾ ನ್ಯಾಮಗೌಡರ್ ಇದ್ದರು. ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯರಿ ಸ್ವಾಗತಿಸಿದರು. ಸಜನಿ ನಿರೂಪಿಸಿದರು.
ಮೂಢನಂಬಿಕೆಗಳಿಗೆ ನಿಷೇಧ ಹೇರುವ ಕುರಿತು ಕಾನೂನು ಜಾರಿಗೆ ತರುವ ಬಗ್ಗೆ ಇನ್ನೂ ಸಂಪುಟದಲ್ಲಿ ಚರ್ಚೆಯೇ ಆಗಿಲ್ಲ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ಹೇಳಿಕೆಯನ್ನು ನೀಡಿದ್ದಾರೆ. ಇಂತಹ ಸೂಕ್ಷ್ಮ ವಿಷಯಗಳು ಬಂದಾಗ ಅಭಿಪ್ರಾಯಬೇಧಗೊಳ್ಳುವುದು ಸಹಜ. ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಕ್ರೋಢೀಕರಿಸಿಯೇ ಈ ವಿಷಯದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಇನ್ನು ಉಜಿರೆಯ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಈಗಾಗಲೇ ಸಿಬಿಐಗೆ ನೀಡಿದ್ದು, ಅನ್ಯಾಯಕ್ಕೊಳಗಾದವರಿಗೆ ನ್ಯಾಯವನ್ನು ಒದಗಿಸಲಾಗುತ್ತದೆ.
- ಯು.ಟಿ. ಖಾದರ್, ಆರೋಗ್ಯ ಸಚಿವ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement