ಕಾಪು' ಉಡುಪಿ ತಾಲೂಕು ಕೇಂದ್ರ ಮಾಡುವ ಛಯೋಜನೆ: ಸೊರಕೆ
ಉಡುಪಿ: ಕಾಪುವನ್ನು ಉಡುಪಿ ತಾಲೂಕು ಕೇಂದ್ರವನ್ನಾಗಿ ಮಾಡುವ ಯೋಜನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಘೋಷಿಸಿದ್ದು, ಕಾಪು ವಿಧಾನಸಭಾ ಕ್ಷೇತ್ರದ ಉಳಿಯಾರಗೋಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದವರು ಪ್ರಕಟಿಸಿದ್ದಾರೆ.
ಅವರು ಸೋಮವಾರ ಇಲ್ಲಿನ ಉಳಿಯಾರಗೋಳಿ ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ವಿತರಿಸಿ ಮಾತನಾಡಿದರು.
ಜನರು ಸವಲತ್ತುಗಳಿಗಾಗಿ ಸರ್ಕಾರಿ ಕಚೇರಿಯಿಂದ ಕಚೇರಿಗೆ ಅಲೆದು ಬಸವಳಿಯುವುದನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸವಲತ್ತು ವಿತರಣೆ ಮಾಡಲಾಗುತ್ತಿದೆ. ಅರ್ಜಿ ಸ್ವೀಕಾರ, ಸಕಾಲದಲ್ಲಿ ಹಾಗೂ ಸ್ಥಳದಲ್ಲೇ ಸಮಸ್ಯೆಗಳನ್ನು ಪರಿಹರಿಸುವಲ್ಲೂ ಕ್ರಮ ಕೈಗೊಳ್ಳಲಾಗುತ್ತಿದೆ. ಕೊಟ್ಟ ಮಾತಿನಂತೆ 3 ತಿಂಗಳಿಗೊಮ್ಮೆ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುತ್ತಿದ್ದು, ಒಂದೇ ಸೂರಿನಡಿ ಸರ್ಕಾರಿ ಸವಲತ್ತುಗಳನ್ನು ನೀಡುತ್ತಿದ್ದೇನೆ ಎಂದು ತಿಳಿಸಿದರು.
ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ವ್ಯವಸ್ಥೆ, ಮೂಲ ಸೌಕರ್ಯ, ರಾಜೀವ್ ಗಾಂಧಿ ವಿದ್ಯುದ್ದೀಕರಣ ಯೋಜನೆಯಡಿ ವಿದ್ಯುತ್ ಸಂಪರ್ಕ, ಮಾಸಾಶನ ಮಂಜೂರು, ಮನಸ್ವಿನಿ ಯೋಜನೆಯಡಿ ಸವಲತ್ತು ವಿತರಣೆ, ಹಕ್ಕುಪತ್ರ ಹಾಗೂ ಹತ್ತು ಸೆಂಟ್ಸ್ ಜಾಗದಲ್ಲಿ ಮನೆ ನಿರ್ಮಾಣ ನೀಡುವ ಸಮಸ್ಯೆ ಪರಿಹಾರಕ್ಕೆ ಶೀಘ್ರ ಪರಿಹಾರ ಕೈಗೊಳ್ಳಲಾಗುವುದು ಎಂದರು.
ಈ ಕಾರ್ಯಕ್ರಮದಲ್ಲಿ 107 ಜನರಿಗೆ ಬಿಪಿಎಲ್ ಕಾರ್ಡ್, 18 ಜನರಿಗೆ ಮಾಸಾಶನ ಮಂಜೂರಾತಿ ಪತ್ರ ವಿತರಿಸಲಾಯಿತು. ತೋಟಗಾರಿಕಾ ಇಲಾಖೆಯಿಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸವಲತ್ತುಗಳನ್ನು ಹಸ್ತಾಂತರಿಸಲಾಯಿತು.
ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರದೀಪ್, ಉಡುಪಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಂಜುನಾಥಯ್ಯ, ಉಡುಪಿ ತಹಸೀಲ್ದಾರ್ ಗುರುಪ್ರಸಾದ್ ಇದ್ದರು.