ಪ್ರತಿ ತಿಂಗಳೂ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ನಡೆಸಲು ಪರಮೇಶ್ವರ್ ಸೂಚನೆ
ಉಡುಪಿ: ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ಪ್ರತಿ ತಿಂಗಳು ನಡೆಸಿ, ಅದರಲ್ಲಿ ಜಿಲ್ಲೆಯ ಪಕ್ಷದ ಎಲ್ಲ ಶಾಸಕರು, ಸಚಿವರು, ಸಂಸದರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಅಧ್ಯಕ್ಷರು ಕಡ್ಡಾಯವಾಗಿ ಭಾಗವಹಿಸಬೇಕು ಮತ್ತು ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಜಿಲ್ಲಾ ಕಾಂಗ್ರೆಸ್ಗೆ ಆದೇಶಿಸಿದ್ದಾರೆ.
ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ವಿವಿಧ ಘಟಕಗಳ ನಾಯಕರ ಸಮಾವೇಶದಲ್ಲಿ ಮಾತನಾಡಿದರು.
ಮುಂಬರುವ ಲೋಕಸಭಾ ಚುನಾವಣೆಯ ಪೂರ್ವಸಿದ್ಧತೆಗಾಗಿ ಎಲ್ಲ ಜಿಲ್ಲೆ ವ್ಯಾಪ್ತಿಯಲ್ಲಿ ಸಮ್ಮೇಳನ ನಡೆಸಿ ಜನಸಾಮಾನ್ಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳ ಮಾಹಿತಿ ನೀಡಬೇಕು. ಪಕ್ಷದ ಕಾರ್ಯಕರ್ತರನ್ನು ನವಂಬರ್ ತಿಂಗಳೊಳಗೆ ತಾಲೂಕು ಮತ್ತು ಜಿಲ್ಲಾ ವ್ಯಾಪ್ತಿಯ ಸರ್ಕಾರದ ವಿವಿಧ ಸಮಿತಿಗಳಿಗೆ ನಾಮನಿರ್ದೇಶನ ಮಾಡಲು ಶಾಸಕರು, ಸಚಿವರು, ಸಂಸದರು ಮತ್ತು ಜಿಲ್ಲಾ ಸಮಿತಿಯವರು ಜಿಲ್ಲಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಚೆಲ್ಲ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಶಾಸಕ ಪ್ರಮೋದ್ ಮಧ್ವರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ. ನಂಜುಂಡಿ, ಎನ್.ಎಸ್. ಬೋಸರಾಜು, ಪ್ರದೇಶ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಸಿ. ವೇಣುಗೋಪಾಲ, ಮಾಜಿ ಶಾಸಕರಾದ ಎಚ್. ಗೋಪಾಲ ಭಂಡಾರಿ, ಪಿ. ಬಸವರಾಜ್, ಕೆಪಿಸಿಸಿ ಕಾರ್ಯದರ್ಶಿಗಳಾದ ಕಡೂರು ಸಿ. ನಂಜಪ್ಪ, ಸೌಂದರ್ಯ ಮಂಜಪ್ಪ, ಎಂ.ಎ. ಗಫೂರ್, ಶ್ಯಾಮಲ ಭಂಡಾರಿ, ಜಿ.ಎ. ಬಾವ, ಕೆಪಿಸಿಸಿ ಸದಸ್ಯರಾದ ಬಿ. ಭುಜಂಗ ಶೆಟ್ಟಿ, ರಘುರಾಮ ಶೆಟ್ಟಿ, ದಿನೇಶ್ ಪುತ್ರನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಜನಾರ್ದನ ತೋನ್ಸೆ ಕಾರ್ಯಕಾರಿ ಸಮಿತಿಯ ವಿವರ ತಿಳಿಸಿದರು.