ಧರ್ಮಸ್ಥಳದ ಮೇಲೆ ಆಪಾದನೆ: ಖಂಡನೆ
ಕುಂದಾಪುರ: ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ನೆಪವನ್ನಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರವನ್ನು ಅವಹೇಳನ ಮಾಡಿರುವುದು ಖಂಡನೀಯ ಎಂದು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಬಿ. ಅಪ್ಪಣ್ಣ ಹೆಗ್ಡೆ ತಿಳಿಸಿದ್ದಾರೆ. ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದ ಮೇಲೆ ಕೆಲವರು ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದ ಅವರು, ಕಳೆದ 4 ದಶಕಗಳಿಂದ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಗ್ರಾಮೀಣ ಬಡಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿದವರು ಹೆಗ್ಗಡೆಯವರು. ಸುಳ್ಳು ಸುದ್ದಿ ಹಬ್ಬಿಸುವವರನ್ನು ಜನಜಾಗೃತಿ ವೇದಿಕೆ ನವಜೀವನ ಸಮಿತಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
'ಪ್ರಾಮಾಣಿಕತೆಯಿದ್ದಾಗ ಯಶಸ್ಸು ಸಾಧ್ಯ'
ಬ್ರಹ್ಮಾವರ: ಯಾವುದೇ ವೃತ್ತಿಯಲ್ಲಿ ಪ್ರಾಮಾಣಿಕತೆ, ತನ್ಮಯತೆ ಇದ್ದಲ್ಲಿ ಮಾತ್ರ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ರಾಷ್ಟ್ರಪ್ರಶಸ್ತಿ ವಿಜೇತ ಬ್ರಹ್ಮಾವರ ಪೊಲೀಸ್ ಠಾಣೆಯ ಶೀನ ಬಿಲ್ಲವ ಹೇಳಿದರು. ಅವರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಎಸ್ಡಿಎಂಸಿ ಸಹಭಾಗಿತ್ವದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ನಮ್ಮ ವೃತ್ತಿಯನ್ನು ಪ್ರೀತಿಸುವುದರೊಂದಿಗೆ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಂದಾಗಿ ಕಾರ್ಯನಿರ್ವಹಿಸಿದ್ದಲ್ಲಿ ಎಂತಹ ಕಠಿಣ ಪರಿಸ್ಥಿತಿಯಲ್ಲೂ ಕಾರ್ಯ ಸಾಧಿಸಬಹುದು ಎಂದರು. ಕಾಲೇಜಿನ ಪ್ರಾಂಶುಪಾಲೆ ತಾರಾದೇವಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಭೀಮರಾಜ್, ಎಸ್ಡಿಎಂಸಿ ಎಸ್. ನಾರಾಯಣ್, ಉಪಪ್ರಾಂಶುಪಾಲ ಬಿ.ಟಿ. ನಾಯ್ಕ, ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಉಪಸ್ಥಿತರಿದ್ದರು. ಸುಶೀಲಾ ಕಾರ್ಯಕ್ರಮ ನಿರೂಪಿಸಿದರು. ಉಷಾ ಬಾಯಿ ವಂದಿಸಿದರು.