ಬೆಳ್ಮಣ್ ಪಿಯು ಕಾಲೇಜು ಎನ್ನೆಸ್ಸೆಸ್ ಉದ್ಘಾಟನೆ
ಉಡುಪಿ: ಭ್ರಷ್ಟಾಚಾರ ಮುಕ್ತ ಸಮಾಜದ ನಿರ್ಮಾಣ ನಮ್ಮೆಲ್ಲರ ಕರ್ತವ್ಯವೂ ಹೌದು. ಬೇರೆ ಯಾರೋ ಇದನ್ನು ಮಾಡಲಿ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ನವಭಾರತ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ತಿಳಿಸಿದರು. ಅವರು ಶಿರ್ವದ ಬೆಳ್ಮಣ್ ಸರ್ಕಾರಿ ಪಪೂ ಕಾಲೇಜಿನ ಎನ್.ಎಸ್.ಎಸ್. ಘಟಕವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಪಂ ಅಧ್ಯಕ್ಷ ಶಂಕರ ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಸದಸ್ಯ ಸುಪ್ರೀತ್ ಶೆಟ್ಟಿ, ಬೆಳ್ಮಣ್ಣು ಲಯನ್ಸ್ ಕ್ಲಬ್ ಅಧ್ಯಕ್ಷ ವಿ.ಕೆ. ರಾವ್ ನಂದಳಿಕೆ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞ ಬಿ. ಸೀತಾರಾಮ ಭಟ್, ಎನ್ನೆಸ್ಸೆಸ್ ಸಲಹಾ ಸಮಿತಿಯ ಸುಧಾಕರ ಆಚಾರ್ಯ, ಸತೀಶ್ ಮಾಡ ಮತ್ತು ಮೋಹನದಾಸ ಶೆಟ್ಟಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶಾಂತಿ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಅಧಿಕಾರಿ ಉಪನ್ಯಾಸಕ ರಣಜಿತ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಾಂಶುಪಾಲ ಡಾ.ಬಿ.ಜನಾರ್ದನ ಭಟ್ ವಂದಿಸಿದರು. ಈ ಸಂದರ್ಭದಲ್ಲಿ ವರ್ಧಮಾನ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಜನಾರ್ದನ ಭಟ್ ಅವರನ್ನು ಉಪನ್ಯಾಸಕ- ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳ ವತಿಯಿಂದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸನ್ಮಾನಿಸಿದರು.