ಗಂಗೊಳ್ಳಿ: ಬೆಳೆಯುತ್ತಿರುವ ಗ್ರಾಮೀಣ ಪ್ರದೇಶ ಗಂಗೊಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸೂಕ್ತ ಜಾಗದ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ತ್ಯಾಜ್ಯ ವಿಲೇವಾರಿಯಾಗಿಲ್ಲ.
ಸುಮಾರು ಒಂದು ಸಾವಿರ ಎಕ್ರೆ ವಿಸ್ತೀರ್ಣ ಹೊಂದಿರುವ ಗಂಗೊಳ್ಳಿಯಲ್ಲಿ ಅಂದಾಜು 16 ಸಾವಿರ ಮಂದಿ ವಾಸಿಸುತ್ತಿದ್ದಾರೆ. ಈ ಹಿಂದೆ ವಾರದಲ್ಲಿ ಕನಿಷ್ಠ 2 ದಿನಗಳಿಗೊಮ್ಮೆ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದ ಗ್ರಾಮ ಪಂಚಾಯಿತಿ ಇದೀಗ ಸೂಕ್ತ ಸ್ಥಳದ ಅಭಾವದಿಂದ ತ್ಯಾಜ್ಯ ವಿಲೇವಾರಿ ಮಾಡಲು ಹೆಣಗಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಪ್ರತಿನಿತ್ಯ ಇಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಗೆ ಸೂಕ್ತ ಸರ್ಕಾರಿ ಜಾಗ ಇಲ್ಲ.
ಈ ಹಿಂದೆ ತ್ಯಾಜ್ಯಗಳನ್ನು ನಿರ್ಜನ ಪ್ರದೇಶಗಳಲ್ಲಿ ಸ್ಥಳೀಯಾಡಳಿತ ತ್ಯಾಜ್ಯ ವಿಲೇವಾರಿ ಮಾಡುತ್ತಿತ್ತು. ಇದೀಗ ಆ ಪ್ರದೇಶದ ಜನರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಗ್ರಾ.ಪಂ.ಗೆ ಹೊಸ ಸಮಸ್ಯೆ ಎದುರಾಗಿದೆ.
ರಾಜ್ಯ ಸರ್ಕಾರದ ಸ್ವಚ್ಛ ಗ್ರಾಮ ಯೋಜನೆಯಡಿ 15 ವರ್ಷಗಳ ಹಿಂದೆ ಗಂಗೊಳ್ಳಿ ಸಮುದ್ರ ತೀರದಲ್ಲಿ ತ್ಯಾಜ್ಯ ವಿಲೇವಾರಿಗೆ ಜಾಗ ಗುರುತಿಸಿ ತೊಟ್ಟಿ ನಿರ್ಮಾಣ ಮಾಡಲಾಗಿದ್ದು, ಪರಿಸರದ ಜನರು ಅಡ್ಡಿಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಸ್ಥಳೀಯಾಡಳಿತ ಹಾಗೂ ಜನಪ್ರತಿನಿಧಿಗಳ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ನಾಗರಿಕರು ಎಚ್ಚರಿಸಿದ್ದಾರೆ.