ನರೇಂದ್ರ ಮೋದಿಗೆ ಪ್ರಧಾನಿ ಪಟ್ಟ ಖಚಿತ; ಡಾ.ಶೇಕ್
ಉಡುಪಿ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಗರಿಷ್ಠ ಪ್ರಮಾಣದಲ್ಲಿ ಬಿಜೆಪಿಯನ್ನು ಬೆಂಬಲಿಸಲಿದ್ದು ನರೇಂದ್ರ ಮೋದಿ ಪ್ರಧಾನಿ ಪಟ್ಟಕ್ಕೆ ಏರುವುದರಲ್ಲಿ ಸಂಶಯವೇ ಇಲ್ಲ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ನಾಹಿದ್ ಶೇಕ್ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಮಾತನಾಡಿ, ಬಿಜೆಪಿ ಸರ್ಕಾರದಿಂದ ಅಲ್ಪಸಂಖ್ಯಾತರಿಗೆ ನೀಡಲ್ಪಟ್ಟ ಬೃಹತ್ ಅನುದಾನಗಳ ಬಗ್ಗೆ ಸಮುದಾಯದ ಜನತೆಗೆ ಮತ್ತೊಮ್ಮೆ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಎನ್. ಎಫ್. ಮೋಸಿನ್, ಉಪಾಧ್ಯಕ್ಷೆ ರಶ್ಮಿ ಡಿ'ಸೋಜಾ, ಪ್ರಧಾನ ಕಾರ್ಯದರ್ಶಿ ಮುಕ್ತಾರ್ ಪಠಾಣ್, ಕಾರ್ಯದರ್ಶಿ ಎಂ. ಸಲೀಂ ಅಂಬಾಗಿಲು, ರಾಜ್ಯ ಬಿಜೆಪಿ ಕಾರ್ಯದರ್ಶಿ ಶ್ಯಾಮಲಾ ಎಸ್. ಕುಂದರ್, ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಕೆ. ಉದಯ್ ಕುಮಾರ್ ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಜೆರಾಲ್ಡ್ ಜಾರ್ಜ್ ಫೆರ್ನಾಂಡಿಸ್ ಇದ್ದರು.