ಪೂಜಾರಿಗೆ ಟಿಕೆಟ್; ಸಿಎಂ, ಕೆಪಿಸಿಸಿ ಅಧ್ಯಕ್ಷಗೆ ಮನವಿ
ಬೆಂಗಳೂರು: ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಮಂಗಳೂರು ಜಿಲ್ಲಾ ಕಾಂಗ್ರೆಸ್‌ನ ಎಲ್ಲ ಬ್ಲಾಕ್ ಅಧ್ಯಕ್ಷರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.
ಮಂಗಳೂರು ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪೂಜಾರಿಯವರ ಹೆಸರನ್ನು ಮಾತ್ರ ಶಿಫಾರಸು ಮಾಡಿದೆ. ಆದರೆ ಈಗ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರ ಪುತ್ರನ ಹೆಸರು ಈಗ ಕೇಳಿ ಬರುತ್ತಿದೆ. ಯಾವುದೇ ಕಾರಣಕ್ಕೂ ಪೂಜಾರಿಯವರಿಗೆ ಟಿಕೆಟ್ ವಂಚಿಸಬಾರದು ಎಂದು ಆಗ್ರಹಿಸಿದ್ದಾರೆ.
ಮನವಿ ಸ್ವೀಕರಿಸಿದ ನಂತರ ಕಾರ್ಯಕರ್ತರ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ, ಬೆಂಗಳೂರು ಉತ್ತರ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಅಮೆರಿಕಾ ಅಧ್ಯಕ್ಷರ ಆಯ್ಕೆ ಮಾದರಿಯಲ್ಲಿ ನಡೆಸಲು ಎಐಸಿಸಿ ಉದ್ದೇಶಿಸಿದೆ.
ಹೀಗಾಗಿ ಕಾರ್ಯಕರ್ತರ ಆಶಯಕ್ಕೆ ಭಂಗ ಬರುವುದಿಲ್ಲ ಎಂದು ಹೇಳಿದರು.
ಈ ಆಯ್ಕೆಗೆ ಫೆಬ್ರವರಿ ಮೊದಲ ವಾರದಲ್ಲಿ ಚುನಾವಣೆ ನಡೆಯುತ್ತದೆ. ಕ್ಷೇತ್ರದ ಎಲ್ಲ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು, ಸೋತ ಅಭ್ಯರ್ಥಿಗಳು, ಕೆಪಿಸಿಸಿಯ 14 ಮುಂಚೂಣಿ ಘಟಕಗಳ ಸ್ಥಳೀಯ ಅಧ್ಯಕ್ಷರು, ಕ್ಷೇತ್ರವನ್ನು ಪ್ರತಿನಿಧಿಸುವ ಎಐಸಿಸಿ ಹಾಗೂ ಕೆಪಿಸಿಸಿ ಸದಸ್ಯರು ಮತದಾರರಾಗಿರುತ್ತಾರೆ. ಚುನಾವಣೆ ನಡೆಸುವುದಕ್ಕೆ ಎಐಸಿಸಿಯೇ ತಜ್ಞರ ಸಮಿತಿಯನ್ನು ಕಳುಹಿಸುತ್ತದೆ ಎಂದು ಹೇಳಿದರು.