ಕಾಂಗ್ರೆಸ್ ಸದಸ್ಯತ್ವ ನೋಂದಣಿಗೆ ಆಸ್ಕರ್ ಫರ್ನಾಂಡಿಸ್ ಚಾಲನೆ
ಉಡುಪಿ: ಪ್ರತೀ ಬ್ಲಾಕ್ಗೆ ತೆರಳಿ ಕಾರ್ಯಕರ್ತರನ್ನು ಗುರುತಿಸಿ ಸದಸ್ಯತ್ವ ನೋಂದಣಿ ಮಾಡುವಲ್ಲಿ ಪದಾಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಹೇಳಿದರು.
ಅವರು ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಿ ಮಾತನಾಡಿದರು.
ಕಳೆದ ಯುಪಿಎ ಸರ್ಕಾರದ ಸಾಧನೆಗಳನ್ನು ಜನತೆ ನೆನಪಿಸಿಕೊಂಡು, ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಇದಕ್ಕೆ ಪೂರಕವಾಗಿ ಇತ್ತೀಚೆಗೆ ನಡೆದ ಉತ್ತರಖಂಡದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಮಾಧ್ಯಮಗಳು ರಾಜ್ಯ ಸರ್ಕಾರದ ವಿರುದ್ಧ ನಿರಂತರ ಟೀಕೆಗಳನ್ನು ಮಾಡುತ್ತಿದ್ದರೂ ಸರ್ಕಾರ ನೀಡಿದ ಜನಹಿತ ಕಾರ್ಯಕ್ರಮಗಳ ಮಾಹಿತಿಯನ್ನು ಜನತೆಗೆ ತಲುಪಿಸುವಲ್ಲಿ ಕಾರ್ಯಕರ್ತರು ತೊಡಗಿಸಿಕೊಳ್ಳಬೇಕು ಎಂದರು.