ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ನೀರಿನ ಯೋಜನೆಗೆ ಅನುದಾನ ಕೊರತೆ ಇಲ್ಲ: ಸಚಿವ ಸೊರಕೆ

Mainashree
Updated On : 7 May 2014, 10:12 am

ಕಾರ್ಕಳ: ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲು ಅನುದಾನದ ಕೊರತೆ ಇಲ್ಲ. ಆದರೆ ಪ್ರತಿ ಗ್ರಾಮ ಪಂಚಾಯಿತಿಯಲ್ಲೂ ನೀರಿನ ಸಮಸ್ಯೆ ಕುರಿತು ವಿಶೇಷ ಗಮನಹರಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ್ ಸೊರಕೆ ಸೂಚನೆ ನೀಡಿದ್ದಾರೆ.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ಚಿಂತನ-ಮಂಥನ ಸಭೆಯಲ್ಲಿ ಗೈರುಹಾಜರಾದ ಪಿಡಿಒ ಅಮಾನತಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಆದೇಶಿಸಿದ ಅವರು, ನೀರಿನ ಬಗ್ಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ. ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಶೀಘ್ರ ಅನುಷ್ಠಾನವಾಗಬೇಕು, ಹತ್ತು ದಿನಗಳೊಳಗಾಗಿ ಪ್ರತ್ಯೇಕ ಸಭೆ ನಡೆಸಲಾಗುವುದು. ಆಗ ಈ ದಿನ ಕೈಗೊಂಡ ನಿರ್ಣಯಗಳೆಲ್ಲ ಅನುಷ್ಠಾನಗೊಂಡಿರಬೇಕು ಎಂದು ಎಚ್ಚರಿಸಿದರು.
ರು.80 ಲಕ್ಷ ಅನುದಾನ: ರಾಜ್ಯ ಸರ್ಕಾರ ಕುಡಿಯುವ ನೀರಿನ ಯೋಜನೆ ಬಗ್ಗೆ ವಿಶೇಷ ಗಮನ ಹರಿಸಿದ್ದು,  ಶಾಸಕರಿಗೂ ಸರ್ಕಾರ ರು.80 ಲಕ್ಷ ಅನುದಾನ ನೀಡುತ್ತಿದೆ. ಸ್ಥಳೀಯಾಡಳಿತದಿಂದ ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡುವವರಿಗೂ ಬಿಲ್ ಪಾವತಿಸುವಲ್ಲಿ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಎಂದು ಸೊರಕೆ ವಿವರಿಸಿದರು.
ತಾಲೂಕು ವ್ಯಾಪ್ತಿಯ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲೂಕು ಪಂಚಾಯಿತಿ ಸದಸ್ಯರು ತಮ್ಮ ವ್ಯಾಪ್ತಿಯ ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆದರು.
ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಶ್ಮಿ ಶೆಟ್ಟಿ, ಪುರಸಭೆ ಅಧ್ಯಕ್ಷೆ ರೆಹಮತ್ ಎನ್. ಶೇಖ್, ಕುಂದಾಪುರ ಸಹಾಯಕ ಕಮಿಷನರ್ ಯೋಗೀಶ್ವರ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಾಣೇಶ್ ರಾವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement