ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉತ್ತರ ಕನ್ನಡ

ಮಾ. 2ರಿಂದ ಕರಾವಳಿ ಉತ್ಸವ

Parashurama
Updated On : 8 Feb 2013, 11:20 am

ಕನ್ನಡಪ್ರಭ ವಾರ್ತೆ, ಕಾರವಾರ, ಫೆ. 7
ಕರಾವಳಿ ಉತ್ಸವವನ್ನು ಮಾ. 2ಮತ್ತು 3ರಂದು ಅದ್ಧೂರಿಯಾಗಿ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಆಯೋಜಿಸಲಾಗುವುದು ಎಂದು ಮೀನುಗಾರಿಕಾ ಸಚಿವ ಆನಂದ ಅಸ್ನೋಟಿಕರ್ ಅವರು ತಿಳಿಸಿದರು.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉತ್ಸವ ಆಯೋಜನೆ ಕುರಿತು ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ನಾಲ್ಕು ವರ್ಷಗಳ ಬಳಿಕ ಜಿಲ್ಲಾ ಮಟ್ಟದಲ್ಲಿ ಉತ್ಸವವನ್ನು ಆಯೋಜಿಸಲಾಗುತ್ತಿದೆ. ಎರಡು ದಿನಗಳ ಕಾಲ ರಾಷ್ಟ್ರ ಮಟ್ಟದ ಮತ್ತು ರಾಜ್ಯ ಮಟ್ಟದ ಖ್ಯಾತ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಲಿದ್ದಾರೆ. ಸ್ಥಳೀಯ ಕಲಾವಿದರಿಗೂ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಸೂಕ್ತ ಅವಕಾಶ ನೀಡಲಾಗುವುದು. ಮಾರ್ಚ್ 2 ಮತ್ತು 3ರಂದು ಜಿಲ್ಲಾಡಳಿತದ ಪರವಾಗಿ ಉತ್ಸವ ಆಚರಿಸಲಾಗುವುದು. ಇನ್ನೂ ಮೂರು ದಿನಗಳ ಕಾಲ ಸ್ಥಳೀಯವಾಗಿ ಉತ್ಸವ ಆಯೋಜಿಸಲು ಅವಕಾಶ ನೀಡಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ವಿವಿಧ ಕಾರ್ಯಕ್ರಮ: ಉತ್ಸವದ ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಶ್ವಾನ ಪ್ರದರ್ಶನ, ದೇಹದಾರ್ಢ್ಯ ಪ್ರದರ್ಶನ ಹಾಗೂ ಸ್ಪರ್ಧೆ, ತೋಟಗಾರಿಕಾ ವಸ್ತು ಪ್ರದರ್ಶನ, ಜಲಕ್ರೀಡೆಗಳು ಉತ್ಸವದ ಪ್ರಮುಖ ಆಕರ್ಷಣೆಯಾಗಲಿವೆ. 5 ದಿನಗಳ ಕಾಲ ವಸ್ತು ಪ್ರದರ್ಶನ ಆಯೋಜಿಸಲಾಗುವುದು. ಸಾರ್ವಜನಿಕರಿಗೆ ಮನೋರಂಜನೆಗಾಗಿ ವಸ್ತು ಪ್ರದರ್ಶನ ಮಳಿಗೆಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು. ಉತ್ಸವಕ್ಕೆ ರು. 70 ಲಕ್ಷವರೆಗೆ ವೆಚ್ಚವಾಗುವ ಅಂದಾಜು ಮಾಡಲಾಗಿದೆ. ಸರ್ಕಾರದಿಂದ ಉತ್ಸವಕ್ಕೆ ಈಗಾಗಲೇ ರು. 20 ಲಕ್ಷ ಬಿಡುಗಡೆ ಮಾಡಲಾಗಿದೆ. ಇನ್ನುಳಿದಂತೆ ಸ್ಥಳೀಯವಾಗಿ ದೇಣಿಗೆಯನ್ನು ಸಂಗ್ರಹಿಸಬೇಕಾಗಿದೆ. ಇದಕ್ಕಾಗಿ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರು ಸಹಕರಿಸಬೇಕು. ಹೆಚ್ಚಿನ ಅನುದಾನಕ್ಕೆ ಕೋರಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.
ಸಮಿತಿಗಳ ರಚನೆ: ಇದಕ್ಕೂ ಮೊದಲು ನಡೆದ ಅಧಿಕಾರಿಗಳ ಹಾಗೂ ಗಣ್ಯರ ಸಭೆಯಲ್ಲಿ ಉತ್ಸವದ ಯಶಸ್ವಿ ಆಯೋಜನೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸ್ವಾಗತ ಸಮಿತಿ, ಹಣಕಾಸು ಸಮಿತಿ, ವಸ್ತು ಪ್ರದರ್ಶನ ಸಮಿತಿ, ಕ್ರೀಡಾ ಸಮಿತಿ, ಸಾಂಸ್ಕೃತಿಕ ಸಮಿತಿ, ಭದ್ರತಾ ಸಮಿತಿ, ಪ್ರಚಾರ ಸಮಿತಿ, ವೇದಿಕೆ ಸಮಿತಿ, ಭದ್ರತಾ ಸಮಿತಿ, ಸಾರಿಗೆ ಸಮಿತಿ ರಚಿಸಲಾಯಿತು. ಈ ಸಮಿತಿ ಸದಸ್ಯರು ತಕ್ಷಣ ಸಭೆ ಸೇರಿ ತಮಗೆ ನಿರ್ವಹಿಸಿರುವ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಇಂಕಾಂಗ್ಲೋ ಜಮೀರ ತಿಳಿಸಿದರು. ಉತ್ಸವದ ದಿನ ಬೆಳಗ್ಗೆ 10ರಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 5 ಗಂಟೆ ಬಳಿಕ ಮಯೂರವರ್ಮ ವೇದಿಕೆಯಲ್ಲಿ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉತ್ಸವದ ಸಿದ್ಧತೆಗೆ ಕಡಿಮೆ ಅವಧಿ ಇದ್ದು, ಸಮಿತಿಗಳು ಈಗಿಂದಲೇ ಕಾರ್ಯ ಆರಂಭಿಸಬೇಕು ಎಂದು ಅವರು ಹೇಳಿದರು. ನಗರಸಭೆ ಅಧ್ಯಕ್ಷ ಗಣಪತಿ ಉಳ್ವೇಕರ್, ಅಪರ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಭಾಷ್ ಗುಡಿಮನಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments