ಮದ್ಯವ್ಯಸನ ಬಿಡಲು ಮನಸ್ಸಂಕಲ್ಪ ಬೇಕು
ಶಿರಸಿ: ಕೇವಲ ಸಾರಾಯಿ ಅಂಗಡಿಗಳನ್ನು ಮುಚ್ಚುವುದರಿಂದ ಮದ್ಯವ್ಯಸನದಿಂದ ವಿಮುಕ್ತಿ ಸಾಧ್ಯವಿಲ್ಲ. ಕೇವಲ ಔಷಧಿಗಳಿಂದಲೂ ಬದಲಾವಣೆ ಸಾಧ್ಯವಿಲ್ಲ. ಮದ್ಯವ್ಯಸನದಿಂದ ಬಿಡುಗಡೆ ಹೊಂದಲು ಮನಸ್ಸಂಕಲ್ಪ ಬೇಕು. ದೃಢ ನಿರ್ಧಾರ ಒಳಗಡೆಯಿಂದ ಬರಬೇಕು. ಆಗಲೇ ಈ ದುಶ್ಚಟವನ್ನು ಹೊಡೆದೋಡಿಸಲು ಸಾಧ್ಯ ಎಂದು ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಅಶಿಸರ ನುಡಿದರು.
ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಇತರ ಸಂಘಟನೆಗಳ ಆಶ್ರಯದಲ್ಲಿ ಏರ್ಪಡಿಸಿದ್ದ ಮದ್ಯ ವರ್ಜನ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.
ಪಾಪ ಮಾಡಲು ಪ್ರೇರೇಪಿಸುತ್ತದೆ: ಮದ್ಯ ವ್ಯಸನ ಪಾಪಗಳನ್ನು ಮಾಡಲು ಪ್ರೇರೇಪಿಸುತ್ತದೆ. ಸಮಾಜಘಾತುಕ ಕಾರ್ಯಗಳಲ್ಲಿ ತೊಡಗುವಂತೆ ಮಾಡುತ್ತದೆ. ಇದಕ್ಕೆ ಜಾತಿ, ಅಂತಸ್ತು, ವಿದ್ಯೆಗಳ ಯಾವ ತಡೆಯೂ ಇಲ್ಲ ಎಂದರು. ಮಕ್ಕಳಿಗೆ ಉತ್ತಮ ಸಂಸ್ಕಾರ ಕೊಡಿ. ಅವರನ್ನು ಚಿಕ್ಕ ವಯಸ್ಸಿನಲ್ಲಿಯೇ ಸನ್ಮಾರ್ಗಕ್ಕೆ ಹಚ್ಚಿ ತಿಳಿವಳಿಕೆ ಕೊಡಿ ಎಂದು ಅಶೀಸರ ಶಿಬಿರಾರ್ಥಿಗಳಿಗೆ ಕರೆ ನೀಡಿದರು. ಅಧ್ಯಕ್ಷತೆ ವಹಿಸಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಹೆಗಡೆ, ಮದ್ಯವ್ಯಸನವನ್ನು ಪರಿಹರಿಸಲು ಸಾಧ್ಯವಿಲ್ಲ ಎಂಬ ಹತಾಶೆ ಬೇಡ. ಮಹಿಳೆಯರು ಸದಾ ಜಾಗೃತರಾಗಿರಬೇಕು. ತಮ್ಮ ಗಂಡಂದಿರು ಮತ್ತೆ ಈ ವ್ಯಸನಕ್ಕೆ ಬಲಿಯಾಗದಂತೆ ಕಾಳಜಿ ವಹಿಸಬೇಕು ಎಂದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ವಿವೇಕ ರಾಯ್ಕರ್ ಸ್ವಾಗತಿಸಿದರು. ಶಿಬಿರಾಧಿಕಾರಿ ನಾಗೇಶ್ ಪ್ರಾಸ್ತಾವಿಕವಾಗಿ ಶಿಬಿರದ ಸಮಗ್ರ ವರದಿ ನೀಡಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಸತೀಶ್ ಶೆಟ್ಟಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಜಿಲ್ಲಾ ಸಂಯೋಜಕ ನರೇಂದ್ರ ಹೆಗಡೆ ಸಭೆಯಲ್ಲಿ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.