ದೇವೇಗೌಡರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿಗಳು
ಬೆಂಗಳೂರು: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕಣಕ್ಕಿಳಿದಿರುವ ಅಭ್ಯರ್ಥಿಗಳು ತಮ್ಮ ಒಳಜಗಳವನ್ನು ಮರೆತು ವಿರೋಧಿ ಪಕ್ಷಗಳ ಹಿರಿಯರಿಗೆ ನಮಿಸಿ ನಾಮಪತ್ರ ಸಲ್ಲಿಸಿದ್ದಾರೆ.
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರುಗಳು ಇದಕ್ಕೆ ಹೊರತಾಗಿಲ್ಲ, ಮಂಗಳವರ ಬೆಂಗಳೂರು ಉತ್ತರ ಹಾಗೂ ದಕ್ಷಿಣದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್ ಮತ್ತು ಕೃಷ್ಣ ಭೈರೇಗೌಡ ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದಾರೆ.
ಇದೇ ರೀತಿ, ಹಾಸನ ಜೆಡಿಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ.
ಇದೇ ವೇಳೆ ಬೆಂಗಳೂರು ಕೇಂದ್ರ ಲೋಕಸಭೆ ಅಭ್ಯರ್ಥಿ ರಿಜ್ವಾನ್ ಹರ್ಷದ್ ಹಾಗೂ ಆಹಾರ ಮತ್ತು ನಾಗರಿಕ ಖಾತೆ ಸಚಿವ ಜಮೀರ್ ಅಹಮದ್ ಖಾನ್ ಪದ್ಮನಾಭನಗರಕ್ಕೆ ತೆರಳಿ ದೇವೇಗೌಡರ ಆಶೀರ್ವಾದ ಪಡೆದಿದ್ದಾರೆ.
ಕೆಲ ದಿನಗಳ ಹಿಂದೆ, ಸಿಎಂ ಕುಮಾರಸ್ವಾಮಿ ಅವರ ಪತ್ನಿ ಅನಿತಾ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ತೆರಳಿ, ಪುತ್ರ ನಿಖಿಲ್ ಕುಮಾರಸ್ವಾಮಿ ಪರ ರ್ಯಾಲಿಯಲ್ಲಿ ಪಾಲ್ಗೋಳ್ಳುವಂತೆ ಮನವಿ ಮಾಡಿದ್ದರು. ಇದೇ ವೇಳೆ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಕೂಡ ಸಿದ್ದರಾಮಯ್ಯ ಮನೆಗೆ ತರಳಿ ಅವರ ಬೆಂಬಲ ಕೋರಿದ್ದರು.
ಹಿರಿಯರ ಆಶೀರ್ವಾದ ಪಡೆಯುವುದು ಸಂಪ್ರದಾಯ, ಇದೇ ರೀತಿ ಬಿಜೆಪಿ ಪಾಳೆಯದಲ್ಲೂ ನಡೆಯುತ್ತಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರ ಆಶೀರ್ವಾದ ಪಡೆದಿದ್ದಾರೆ,
ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಜನಾರ್ದನ ಪೂಜಾರಿ ಅವರ ಪಾದಕ್ಕೆರಗಿ ಆಶೀರ್ವಾದ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics