ದೇಶ

ಲೋಕಸಭಾ ಚುನಾವಣೆ: 437 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ, ಇದೇ ಮೊದಲ ಬಾರಿಗೆ ಹೆಚ್ಚಿನ ಸ್ಥಾನಗಳಲ್ಲಿ ಕಣಕ್ಕೆ

Nagaraja AB

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ 437 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇದೇ ಮೊದಲ ಬಾರಿಗೆ ಹೆಚ್ಚಿನ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸುವ ಮೂಲಕ ಎದುರಾಳಿ ಕಾಂಗ್ರೆಸ್ ಪಕ್ಷಕ್ಕೆ ಸೆಡ್ಡು ಹೊಡೆಯಲಾಗಿದೆ.

2014ರ ಲೋಕಸಭಾ ಚುನಾವಣೆಯಲ್ಲಿ 427 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 282 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 450 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 44 ಸ್ಥಾನಗಳಲ್ಲಿ ಮಾತ್ರ   ಗೆದ್ದಿತ್ತು.

2014ರ ನಂತರ ದೇಶಾದ್ಯಂತ ವಿಸ್ತರಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ಈ   ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್  ಪಕ್ಷಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಮೈತ್ರಿ  ಮುರಿದುಕೊಂಡಿರುವ ಬಿಜೆಪಿ ಎಲ್ಲಾ  ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. 2014ಕ್ಕೆ ಹೋಲಿಸಿದರೆ ಕಾಂಗ್ರೆಸ್ ಈ ಸಲ ಹೆಚ್ಚಿನ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಗಿಂತ ಸ್ವಲ್ಪ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.
ಕರ್ನಾಟಕದಲ್ಲಿ 2014ರಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನ  ಅಭ್ಯರ್ಥಿಗಳನ್ನು ನಿಲ್ಲಿಸಿದ್ದ ಕಾಂಗ್ರೆಸ್ ಈಗ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಅದೇ ರೀತಿ ಬಿಹಾರದಲ್ಲಿ ಹೊಸ ಪಕ್ಷಗಳೊಂದಿಗೆ ಮೈತ್ರಿಯನ್ನು ವಿಸ್ತರಿಸಿಕೊಂಡಿದೆ.
SCROLL FOR NEXT