ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಗುರುವಾರ ಅಧಿಕೃತವಾಗಿ ಪ್ರಕಟಿಸಲಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲು ಅಜಯ್ ರಾಯ್ ಅವರನ್ನು ಕಣಕ್ಕಿಳಿಸಲಾಗಿದೆ.
ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಅಲ್ಲದೆ ಸ್ವತಃ ಅವರ ಪತಿ ರಾಬರ್ಟ್ ವಾದ್ರಾ ಅವರು ಸಹ ಪ್ರಿಯಾಂಕಾ ಪ್ರಧಾನಿ ವಿರುದ್ಧ ಸ್ಪರ್ಧಿಸಲು ಸಿದ್ಧರಿದ್ದಾರೆ. ಆದರೆ ಈ ಬಗ್ಗೆ ಪಕ್ಷದ ನಿರ್ಧಾರ ಅಂತಿಮ ಎಂದಿದ್ದರು. ಈಗ ಆ ಎಲ್ಲಾ ಅನುಮಾನಗಳಿಗೂ ತೆರೆ ಬಿದ್ದಿದ್ದು, ಅಜಯ್ ರಾಯ್ ಗೆ ಟಿಕೆಟ್ ನೀಡಲಾಗಿದೆ.
2014ರ ಲೋಕಸಭೆ ಚುನಾವಣೆಯಲ್ಲಿ ಅಜಯ್ ರಾಯ್ ಅವರು ಮೋದಿ ವಿರುದ್ಧ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು. ಪ್ರಧಾನಿ ಮೋದಿ ಅವರು 3.37 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಲಾಗಿದ್ದು, ಗೋರಕ್ ಪುರದಿಂದ ಮಧುಸೂದನ್ ತಿವಾರಿ ಅವರನ್ನು ಕಣಕ್ಕೆ ಇಳಿಸಿದೆ.
ಮೇ 19 ವಾರಣಾಸಿ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಮೋದಿ ಏಪ್ರಿಲ್ 26 ರಂದು ನಾಮಪತ್ರ ಸಲ್ಲಿಸಲಿದ್ದಾರೆ.