ಪ್ರಧಾನಿ ನರೇಂದ್ರ ಮೋದಿ ವಾರ್ಧ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ: ಚುನಾವಣಾ ಆಯೋಗ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ವಾರ್ಧದಲ್ಲಿ ನಡೆಸಿದ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ಜನಪ್ರತಿನಿಧಿಗಳ ಕಾಯ್ದೆಯಡಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಆರೋಪವನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣದಲ್ಲಿ ಯಾವುದೇ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಕೇರಳದ ವಯಾನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿರ್ಧಾರವನ್ನು ಟೀಕಿಸಿದ್ದ ಪ್ರಧಾನಿ ಮೋದಿ ಕಾಂಗ್ರೆಸ್ ಹಿಂದೂಗಳನ್ನು ಅವಮಾನ ಮಾಡಿದೆ, ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ತಮ್ಮ ನಾಯಕನನ್ನು ಕಣಕ್ಕಿಳಿಸಲು ಹೆದರುತ್ತಿದ್ದಾರೆ. ಅದಕ್ಕಾಗಿಯೇ ಅಲ್ಪಸಂಖ್ಯಾತರೆಂದು ಗುರುತಿಸಲ್ಪಡುವವರು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರದಿಂದ ಪುನರ್ವಸತಿ ಪಡೆಯುವುದಕ್ಕೆ ರಾಹುಲ್ ಗಾಂಧಿ ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.
ಈ ಹೇಳಿಕೆ ವಿರುದ್ಧ ದೂರು ದಾಖಲಿಸಿದ್ದ ಕಾಂಗ್ರೆಸ್ ಪ್ರಧಾನಿ ಮೋದಿ ಭಾಷಣ ದ್ವೇಷ ಪೂರಿತ ಹಾಗೂ ವಿಭಜನೆಯ ಭಾಷಣ ಎಂದು ಆರೋಪಿಸಿತ್ತು.