ದೇಶ

ಗೋಡ್ಸೆ 'ದೇಶಭಕ್ತ' ಎಂದ ಪ್ರಗ್ಯಾ ಠಾಕೂರ್; ಹೇಳಿಕೆ ಖಂಡಿಸಿದ ಬಿಜೆಪಿ, ಕ್ಷಮೆಯಾಚಿಸುವಂತೆ ಸೂಚನೆ

Lingaraj Badiger
ಭೋಪಾಲ್: ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಷ್ಟ್ರಪಿತ ಮಹಾತ್ಮಾ ಗಾಂಧಿಯ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಾರೆ.
ಇಂದು ಭೋಪಾಲ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪ್ರಗ್ಯಾ ಸಿಂಗ್ ಠಾಕೂರ್, ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಉಳಿಯುತ್ತಾರೆ ಎಂದು ಹೇಳಿದ್ದಾರೆ.
ನಾಥೂರಾಮ್ ಗೋಡ್ಸೆ ಬಗ್ಗೆ ಕೆಲವರು ಹಗುರವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಅಂತವರಿಗೆ ಈ ಚುನಾವಣೆ ಮೂಲಕ ಉತ್ತರ ನೀಡಲಾಗುತ್ತದೆ ಎಂದು ಪ್ರಗ್ಯಾ ಸಿಂಗ್ ಪರೋಕ್ಷವಾಗಿ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ವಿರುದ್ಧ ಕಿಡಿಕಾರಿದ್ದಾರೆ.
ಪ್ರಗ್ಯಾ ಸಿಂಗ್ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹರಾವ್ ಅವರು, ಪ್ರಗ್ಯಾ ಸಿಂಗ್ ಠಾಕೂರ್ ಹೇಳಿಕೆಯನ್ನು ಬಿಜೆಪಿ ಒಪ್ಪಿಕೊಳ್ಳುವುದಿಲ್ಲ ಮತ್ತು ಅದನ್ನು ಖಂಡಿಸುತ್ತದೆ. ಈ ಕುರಿತು ಪಕ್ಷ ಅವರ ಬಳಿ ಸ್ಪಷ್ಟನೆ  ಕೇಳಿದ್ದು, ಹೇಳಿಕೆಗೆ ಕ್ಷಮೆಯಾಚಿಸುವಂತೆಯೂ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಏಪ್ರಿಲ್ ನಲ್ಲಿ ನಾಥೂರಾಮ್ ಗೋಡ್ಸೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಗ್ಯಾ ಸಿಂಗ್, ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ್ದ ಗೋಡ್ಸೆ ಬದುಕಿದ್ದರೆ ಅವರಿಗೂ ಬಿಜೆಪಿ ಟಿಕೆಟ್ ನೀಡುತಿತ್ತು ಎಂದು ಹೇಳಿದ್ದರು. ಈ ವಿಚಾರವಾಗಿ ಅನೇಕರು ಅಸಮಾಧಾನ ಹೊರ ಹಾಕಿದ್ದರು.
ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
SCROLL FOR NEXT