ಬೆಳಗಾವಿ: ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟದ ಹಲವು ಶಾಸಕರು ಪಕ್ಷ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ್ ಜಾಧವ್ ಅವರ ರಾಜೀನಾಮೆ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆಗಳೂ ಅಂಗೀಕಾರಗೊಳ್ಳಲಿವೆ ಎಂಬ ವಿಶ್ವಾಸ ಕೆಲವು ಶಾಸಕರಲ್ಲಿ ಮೂಡಿದೆ. ಅವರೂ ಕೂಡ ತಮ್ಮ ಶಾಸಕ ಸ್ಥಾನಕ್ಕೆ ಶೀಘ್ರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಿದರು. ಆದಾಗ್ಯೂ ಮೈತ್ರಿ ಕೂಟದ ಯಾವುದೇ ಶಾಸರಕನ್ನು ಬಿಜೆಪಿ ಸಂಪರ್ಕಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲೆಯ ಎರಡೂ ಲೋಕಸಭಾ ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ. ಬೆಳಗಾವಿಯ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ಸುರೇಶ್ ಅಂಗಡಿ, ಚಿಕ್ಕೋಡಿ ಕ್ಷೇತ್ರದ ಅಣ್ಣಾ ಸಾಹೇಬ್ ಜೊಲ್ಲೆ ಅತ್ಯಧಿಕ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕುರುಬ ಸಮುದಾಯವನ್ನು ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ವಿರುದ್ಧ ಜೆಡಿಎಸ್ ನಾಯಕರು ಜಾತಿ ವಿಷಯ ಪ್ರಸ್ತಾಪಿಸಿ ಅವಮಾನ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ಹರಿಹಾಯ್ದರು.
ಮಂಡ್ಯ ಕ್ಷೇತ್ರ ಹೊರತುಪಡಿಸಿ ಎಲ್ಲಾ 27 ಕ್ಷೇತ್ರಗಳಿಗೂ ಯಾವುದೇ ವಿವಾದವಿಲ್ಲದೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಆದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟದಲ್ಲಿ ಇನ್ನೂ ಗೊಂದಲ ಮುಗಿದಿಲ್ಲ ಎಂದು ಅವರು ಟೀಕಿಸಿದರು.
ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics