ಮಂಡ್ಯ: ದಿನದಿಂದ ದಿನಕ್ಕೆ ಮಂಡ್ಯ ಲೋಕಸಭಾ ಅಖಾಡ ರಂಗೇರುತ್ತಿರುವಂತೆಯೇ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ ಕೂಡ ತಾರಕಕ್ಕೇರಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡಿದ ಆರೋಪದ ಮೇರೆಗೆ ಜಿಲ್ಲೆಯ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಈ ಬಗ್ಗೆ ಕೆಪಿಸಿಸಿ ಉಚ್ಛಾಟನೆಗೊಂಡ ಎಲ್ಲ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಬಹಿರಂಗವಾಗಿ ಗುರುತಿಸಿಕೊಂಡ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ನಿಖಿಲ್ ಕುಮಾರಸ್ವಾಮಿ ವಿರುದ್ಧ ಪ್ರಚಾರ ಮಾಡಿದ್ದ ಆರೋಪ ಮೇರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ವಜಾಗೊಳಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಘೋರ್ಪಡೆ ಅವರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.
ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ನೀಡಿದ ಕೆಪಿಸಿಸಿ
ಇನ್ನು ರೆಬಲ್ ಆಗಿರುವ ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸೇರಿದಂತೆ ಇತರೆ ಪ್ರಮುಖ ನಾಯಕರನ್ನು ಕಾಂಗ್ರೆಸ್ ಟಚ್ ಮಾಡಿಲ್ಲ. ಕೇವಲ ಸಣ್ಣಪುಟ್ಟ ಮುಖಂಡರನ್ನು ಮಾತ್ರ ವಜಾಗೊಳಿಸಿದೆ. ಆದರೆ ಪಕ್ಷದ ರೆಬೆಲ್ ನಾಯಕರಿಗೆ ಈ ಮೂಲಕ ಕೆಪಿಸಿಸಿ ಪರೋಕ್ಷ ಎಚ್ಚರಿಕೆ ನೀಡಿದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದ ಮಾಜಿ ಶಾಸಕ ಚೆಲುವರಾಯ ಸ್ವಾಮಿ ಅವರು, 'ಬೇರೆ ಕಡೆ ಮೈತ್ರಿಯಾಗಲೀ ಆದ್ರೆ ಮಂಡ್ಯದಲ್ಲಿ ನಮ್ಮ ಪಾಡಿಗೆ ನಮ್ಮನ್ನು ಬಿಡಿ ಎಂದು ಬಹಿರಂಗವಾಗಿಯೇ ಹೇಳಿದ್ದರು. ಅಷ್ಟೇ ಅಲ್ಲದೇ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಕೂಡ ಮಂಡ್ಯ ಜಿಲ್ಲಾ ನಾಯಕರ ಜೊತೆ ಸಂಧಾನ ಸಭೆ ನಡೆಸಿದ್ದರೂ ಪ್ರಯೋಜಕ್ಕೆ ಬಂದಿಲ್ಲ. ಇದೇ ಕಾರಣಕ್ಕೆ ಅಂತಿಮವಾಗಿ ಕೆಪಿಸಿಸಿ ಈ ಉಚ್ಚಾಟನೆ ಅಸ್ತ್ರವನ್ನು ಪ್ರಯೋಗಿಸಿದೆ ಎನ್ನಲಾಗಿದೆ.
ಉಚ್ಚಾಟನೆಗೊಂಡ 7 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು
1) ಹೆಚ್.ಅಪ್ಪಾಜಪ್ಪ, ಮಂಡ್ಯ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
2) ಎ.ಎಸ್.ರಾಜೀವ್, ಭಾರತೀ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
3) ಪುಟ್ಟರಾಮು, ಮಳವಳ್ಳಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
4) ಕೆ.ಜೆ.ದೇವರಾಜ್, ಮಳವಳ್ಳಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
5) ಎಂ.ಪ್ರಸನ್ನ, ನಾಗಮಂಗಲ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
6) ಕೆ.ಆರ್.ರವೀಂದ್ರ ಬಾಬು, ಕೆ.ಆರ್.ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
7) ಎಸ್.ಬಿ.ಪ್ರಕಾಶ್, ಮೇಲುಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics