ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಪಕ್ಷ ತನ್ನ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿಯಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಹೆಸರು ಪ್ರಕಟಿಸದೇ ಇರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಪ್ರಸ್ತುತ 2ನೇ ಪಟ್ಟಿಯಲ್ಲೂ ಅವರ ಹೆಸರಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಾದರೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ಲಭಿಸಬಹುದು ಎಂಬ ನಿರೀಕ್ಷೆ ಹುಸಿಯಾಗಿದ್ದು, ಆ ಕ್ಷೇತ್ರದಿಂದ ಬೇರೆಯವರನ್ನು ಕಣಕ್ಕಿಳಿಸುವ ಕುರಿತ ಪ್ರಯತ್ನವೂ ನಡೆದಿದೆ.
ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಸ್ಪರ್ಧೆ?
ಪಕ್ಷದ ರಾಜ್ಯ ಘಟಕದಿಂದ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿನಿ ಅನಂತಕುಮಾರ್ ಅವರ ಹೆಸರನ್ನು ಮಾತ್ರ ರಾಷ್ಟ್ರೀಯ ಘಟಕಕ್ಕೆ ಶಿಫಾರಸು ಮಾಡಲಾಗಿದೆ. ಆದರೆ, ಸಂಘ ಪರಿವಾರದ ಮುಖಂಡರಾದ ತೇಜಸ್ವಿನಿ ಅವರ ಬದಲಿಗೆ ಪಕ್ಷದ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಬಲ ಹಿಂದುತ್ವ ಪ್ರತಿಪಾದಕ ತೇಜಸ್ವಿ ಸೂರ್ಯ ಅವರ ಹೆಸರನ್ನು ವರಿಷ್ಠರ ಮುಂದೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪಕ್ಷದಲ್ಲೇ ಪರ ವಿರೋಧದ ಚರ್ಚೆ ಮುಂದುವರೆದಿದೆ. ಇದೇ ಕಾರಣಕ್ಕೆ ಇನ್ನೂ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮಗೊಂಡಿಲ್ಲ.
ಶನಿವಾರ ರಾತ್ರಿ ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕ ಜೆ.ಪಿ.ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದ್ದಾರೆ. ಇನ್ನು ಹಾಲಿ ಸಂಸದ ಕರಡಿ ಸಂಗಣ್ಣ ಪ್ರತಿನಿಧಿಸುವ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲ ಮುಂದುವರೆದಿದೆ. ಕರಡಿ ಸಂಗಣ್ಣ ಅವರ ಬದಲು ಡಾ.ಬಸವರಾಜ್ ಅಥವಾ ಸಿ.ವಿ.ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಪ್ರಸ್ತಾವನೆಯೂ ಗಂಭೀರವಾಗಿ ವರಿಷ್ಠರ ಮುಂದಿದೆ. ಈ ಬಗ್ಗೆಯೂ ಭಾನುವಾರವೇ ಸ್ಪಷ್ಟಚಿತ್ರಣ ಹೊರಬೀಳುವ ನಿರೀಕ್ಷೆಯಿದೆ. ಭಾನುವಾರ ಮೂರನೇ ಹಾಗೂ ಅಂತಿಮ ಪಟ್ಟಿಹೊರಬೀಳುವ ಸಾಧ್ಯತೆ ನಿಚ್ಚಳವಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos