ಬೆಂಗಳೂರು: ಲೋಕಸಭಾ ಚುನಾವಣೆಗೆ ಬಾಕಿ ಇರುವ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಸಂಜೆ ಬಿಡುಗಡೆಯಾಗಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದ ಡಾಲರ್ಸ್ ಕಾಲೋನಿಯ ಅವರ ನಿವಾಸದಲ್ಲಿ ತಮಗೆ ಕೃತಜ್ಞತೆ ಸಲ್ಲಿಸಲು ಆಗಮಿಸಿದ್ದ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಟಿಕೆಟ್ ಬಗ್ಗೆಯೂ ಇಂದು ಸಂಜೆಯೊಳಗೆ ಇತ್ಯರ್ಥವಾಗಲಿದೆ. ಕೊಪ್ಪಳದಿಂದ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ಬಹುತೇಕ ನಿಶ್ಚಿತ ಎಂದು ಹೇಳಿದರು.
ದರ್ಶನ್ ಹಾಗೂ ಯಶ್ ಅವರನ್ನು ಕಳ್ಳೆತ್ತುಗಳು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಛೇಡಿಸಿದ್ದಾರೆ. ಅಪ್ಪ-ಮಕ್ಕಳಿಗೆ ಅತಂತ್ರ ಪರಿಸ್ಥಿತಿ ಉಂಟಾಗಿರುವುದರಿಂದಲೇ ಕುಮಾರಸ್ವಾಮಿ ಈ ರೀತಿ ಹತಾಶ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಮಾತುಗಳು ಅವರಿಗೆ ಬೇಕಾಗಿರಲಿಲ್ಲ. ಈ ಬಾರಿ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.