ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕಾಂಗ್ರೆಸ್ - ಜೆಡಿಎಸ್ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮೈತ್ರಿ ಪಕ್ಷಗಳ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಇಂದು ನೆಲಮಂಗಲದಲ್ಲಿ ಬೃಹತ್ ಮೈತ್ರಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ತಾವು ಮುಖ್ಯಮಂತ್ರಿಯಾಗಿ ಜಾರಿಗೆ ತಂದ ಎಲ್ಲ ಯೋಜನೆಗಳು ಮುಂದುವರಿದಿವೆ. ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ನೀಡಿದ ಭರವಸೆಗಳನ್ನು ಈಡೇರಿಸಲಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರಿಂದ ದೇಶದ ಆರ್ಥಿಕ ಸ್ಥಿತಿ ಹಾಳಾಗಿದೆ. ಕೋಮುವಾದಿ ಪಕ್ಷ ಮತ್ತೆ ಅಧಿಕಾರಕ್ಕೆ ಬಾರದಂತೆ ತಡೆಯಬೇಕು. ಯಾರು ಪ್ರಜಾಪ್ರಭುತ್ವವನ್ನು ಬೆಂಬಲಿಸುತ್ತಾರೆ, ದೇಶದಲ್ಲಿ ಶಾಂತಿಯನ್ನು ಬಯಸುತ್ತಾರೋ ಎಲ್ಲ ಸೇರಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಶ್ರಮಿಸಬೇಕು ಎಂದರು.
ಇಲ್ಲಿಂದಲೇ (ಕರ್ನಾಟಕ) ಇಡೀ ದೇಶಕ್ಕೆ ಸಂದೇಶ ಕಳುಹಿಸಬೇಕು. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ರೈತರು ಕಷ್ಟ ಪಡುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ಅವರನ್ನು ಪ್ರಧಾನಿಯಾಗಿ ಮಾಡಬೇಕು ಎಂದು ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದರು.