ಕರ್ನಾಟಕ

ಮಂಡ್ಯದಲ್ಲಿ ಸುಮಲತಾಗೆ ಪರೋಕ್ಷ ಬೆಂಬಲ; ಚುನಾವಣೆ ಬಳಿಕ ಕೈ ಬಂಡಾಯ ನಾಯಕರ ವಿರುದ್ಧ ಕ್ರಮ

Srinivasamurthy VN
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಪರೋಕ್ಷ ಬೆಂಬಲ ನೀಡಿದ್ದ ರೆಬೆಲ್ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂದು ತಿಳಿದುಬಂದಿದೆ.
ಸುದ್ದಿಸಂಸ್ಥೆ ವರದಿ ಮಾಡಿರುವಂತೆ ಹಾಲಿ ಲೋಕಸಭಾ ಚುನಾವಣೆ ಮುಗಿದ ನಂತರ ಮಂಡ್ಯದ ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ. ಮಂಡ್ಯ ಲೋಕಸಭಾ ಚುನಾವಣೆ ಸಮಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡದ ಮತ್ತು ಪಕ್ಷದ ಸೂಚನೆಯಂತೆ ನಡೆದುಕೊಳ್ಳದ ಮಾಜಿ ಸಚಿವರಾದ ಚೆಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ, ವಿಜಯಲಕ್ಷ್ಮೀ ಬಂಡಿ ಸಿದ್ದೇಗೌಡ ಸೇರಿದಂತೆ ಐವರು ರೆಬೆಲ್ ನಾಯಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಪಕ್ಷ ಮುಂದಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಕೆಲಸ ಮಾಡದ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಜೆಡಿಎಸ್ ತೀವ್ರ ಒತ್ತಡ ಹಾಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾನೂನು ಘಟಕ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡದ ಐವರು ಕಾಂಗ್ರೆಸ್ ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ಶಿಫಾರಸ್ಸು ಮಾಡಿದ್ದು, ಲೋಕಸಭೆ ಚುನಾವಣೆ ಮುಗಿದ ಬಳಿಕ ಕ್ರಮ ಜರುಗಿಸಲು ಕೆಪಿಸಿಸಿ ಮುಂದಾಗಿದೆ ಎನ್ನಲಾಗಿದೆ.
ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ: ಚೆಲುವರಾಯ ಸ್ವಾಮಿ ವಿಶ್ವಾಸ
ಈ ನಡುವೆ ನಾವು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿಲ್ಲ. ಅದೇ ರೀತಿ ನಿಖಿಲ್ ವಿರುದ್ಧವೂ ಕೆಲಸ ಮಾಡಿಲ್ಲ. ಹೀಗಾಗಿ ಶಿಸ್ತು ಕ್ರಮ ಜರುಗಿಸುವ ಪ್ರಶ‍್ನೆಯೇ ಬರುವುದಿಲ್ಲ ಎಂದು ಚೆಲುವರಾಯ ಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.  ಈಗಾಗಲೇ ಅವರು ಕೆಪಿಸಿಸಿ ಅಧ‍್ಯಕ್ಷ ದಿನೇಶ್ ಗುಂಡುರಾವ್ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
SCROLL FOR NEXT