ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪುತ್ರನಿಗೆ ಸಹಾಯ ಮಾಡಲು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಸ್ವಪಕ್ಷೀಯರೇ ಸಿಎಂ ವಿರುದ್ಧ ತಿರುಗಿಬಿದ್ದಿದ್ದಾರೆ. ಪುತ್ರ ವ್ಯಾಮೋಹದಿಂದ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ಉಂಟಾಗಿದೆ ಎಂದು ಸಿದ್ದರಾಮಯ್ಯ ಆಪ್ತ, ಕಂದಾಯ ಸಚಿವ ಶ್ರೀನಿವಾಸ್ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಗನಿಗೆ ಗುತ್ತಿಗೆ ಕೊಡಿಸುವ ವಿಚಾರದಲ್ಲಿ ಸಿದ್ದರಾಮಯ್ಯ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂಬ ಬಗ್ಗೆ ಟಿವಿ, ಪತ್ರಿಕೆಗಳಲ್ಲಿ ವರದಿಗಳನ್ನು ನೋಡಿದ್ದೇನೆ. ಈ ಬಗ್ಗೆ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದರೆ ಉತ್ತಮ ಎಂದು ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ. ಈ ಪ್ರಕರಣದಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಶ್ರೀನಿವಾಸ್ ಪ್ರಸಾದ್, ಖಂಡಿತವಾಗಿಯೂ ಈ ಪ್ರಕರಣದಿಂದ ಕಾಂಗ್ರೆಸ್ ಪಕ್ಷ, ಸರ್ಕಾಕ್ಕೆ ಕಳಂಕ ಉಂಟಾಗಿದೆ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಕೆಪಿಸಿಸಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಹ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಅಧಿಕಾರ ದುರ್ಬಳಕೆ ಆರೋಪ ಪ್ರಕರಣದಿಂದ ಕಾಂಗ್ರೆಸ್ ಮಾನ ಹೋಗಿದೆ. ಕೂಡಲೇ ಸಿದ್ದರಾಮಯ್ಯ ಅವರ ಮಗನ ಕಂಪನಿಗೆ ನೀಡಿರುವ ಗುತ್ತಿಗೆಯನ್ನು ವಾಪಸ್ ಪಡೆಯಬೇಕು ಎಂದು ಪೂಜಾರಿ ಆಗ್ರಹಿಸಿದ್ದರು.